ಬೆಂಗಳೂರು:ದಕ್ಷಿಣ ಭಾರತದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಇಂದು ವಿಧಿವಶರಾಗಿದ್ದಾರೆ. ಇಂದು ಮುಂಜಾನೆ ಅಪ್ಪು, ಜಿಮ್ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ, ಲಘು ಹೃದಯಾಘಾತ ಸಂಭವಿಸಿತ್ತು. ವಿಕ್ರಂ ಆಸ್ಪತ್ರೆಗೆ ದಾಖಲಿಸಿತ್ತಾದರೂ, ಪುನೀತ್ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.
ನಟ ಪುನೀತ್ ರಾಜ್‌ಕುಮಾರ್ ಅಗಲಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. "ಕನ್ನಡದ ಖ್ಯಾತನಟ ಶ್ರೀ ಪುನೀತ್ ರಾಜ್‌ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದು, ನಾನು ತೀವ್ರ ಆಘಾತಕ್ಕೆ ಒಳಗಾಗಿದ್ದೇನೆ. ಕನ್ನಡಿಗರ ಮೆಚ್ಚಿನ ನಟ ಅಪ್ಪು ನಿಧನದಿಂದ ಕನ್ನಡ ಹಾಗೂ ಕರ್ನಾಟಕಕ್ಕೆ ಅಪಾರ ನಷ್ಟವಾಗಿದ್ದು, ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಿ, ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ." ಎಂದು ಟ್ವೀಟ್ ಮಾಡಿದ್ದಾರೆ.
ಸಚಿವ ಕೆ.ಎಸ್. ಈಶ್ವರಪ್ಪ ಶೋಕ ಸಂದೇಶ:
ಕನ್ನಡ ಚಿತ್ರ ರಂಗದ ಖ್ಯಾತ ಚಿತ್ರನಟ ಯುವರತ್ನ ಪುನೀತ್ ರಾಜ್‌ಕುಮಾರ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖವಾಗಿದೆ. ಪುನೀತ್ ಅವರ ನಿಧನದ ಈ ದಿನ ಕೇವಲ ಚಿತ್ರರಂಗದ ಪಾಲಿಗೆ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗ ಮತ್ತು ಕರ್ನಾಟಕದ ಪಾಲಿಗೆ ಕರಾಳ ದಿನ.
ಕನ್ನಡ ಭಾಷೆ, ನೆಲ, ಜಲದ ವಿಚಾರ ಬಂದಾಗ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು. ಎಲ್ಲರ ಮನಗಳಲ್ಲಿ ನೆಲೆಸಿರುವ ಅಪ್ಪು ಅವರ ನಿಧನದ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ, ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.