ಬೆಂಗಳೂರು :ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಹೈಕೋರ್ಟ್ಗೆ ದೂರು ಸಲ್ಲಿಸಲಾಗಿದೆ.
ನಟ ದರ್ಶನ್ ಅಲ್ಲದೇ, ಅಬಕಾರಿ ಸಚಿವ ನಾಗೇಶ್, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಎಂ ಕೆ ಸೋಮಶೇಖರ್ ಸೇರಿದಂತೆ ಹಲವು ರಾಜಕೀಯ ನಾಯಕರು ಕೂಡ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಕೊರೊನಾ ಸೋಂಕು ಹರಡಲು ಕಾರಣವಾಗಿದ್ದಾರೆ. ಇವರ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ನಗರದ ವಕೀಲೆ ಗೀತಾ ಮಿಶ್ರಾ ಹೈಕೋರ್ಟ್ಗೆ ಜ್ಞಾಪನಾ ಪತ್ರ ಸಲ್ಲಿಸಿದ್ದಾರೆ.
ನಟ ದರ್ಶನ್, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಎಂ ಕೆ ಸೋಮಶೇಖರ್ ಅವರು ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಎಸ್ಒಪಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ. ಅಂತೆಯೇ ಅಬಕಾರಿ ಸಚಿವ ಹೆಚ್. ನಾಗೇಶ್ ತಮ್ಮ ಕಾರ್ಯಕರ್ತರ ಅಂಗಡಿ ಮಳಿಗೆ ಉದ್ಘಾಟಿಸಿ ಅವರ ಜೊತೆ ಸೇರಿ ಪಾರ್ಟಿ ಮಾಡಿದ್ದಾರೆ. ಈ ವೇಳೆ ಮಾಸ್ಕ್ ಧರಿಸಿಲ್ಲ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡಿಲ್ಲ ಎಂದು ದೂರಿದ್ದಾರೆ.
ಅಲ್ಲದೇ, ಕೊರೊನಾ ಮಾರ್ಗಸೂಚಿಗಳನ್ನೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಸರ್ಕಾರ ಹೇಳಿದೆ. ಆದರೆ, ಕಾನೂನು ರೂಪಿಸುವ ನಾಯಕರೇ ಕಾನೂನು ಉಲ್ಲಂಘಿಸುತ್ತಿದ್ದಾರೆ. ಜನ ಸಾಮಾನ್ಯರಿಗೊಂದು ನಿಯಮ ಪ್ರಭಾವಿಗಳಿಗೊಂದು ನಿಯಮ ಎಂಬಂತೆ ಭಾವಿಸಿದ್ದಾರೆ. ಹೀಗಾಗಿ ಇವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ನಿಯಮಗಳ ಅನುಸಾರ ಕ್ರಮ ಕೈಗೊಳ್ಳಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.