ಸಿನಿಮಾ ರಂಗಕ್ಕೆ ಸಂಬಂಧಿಸಿದ ಸಾಕಷ್ಟು ಜನ ಬಡ ಕಲಾವಿದರ ಮನೆಯ ಗೋಡೆಯನ್ನು ಶ್ರೀಮಂತವಾಗಿರಿಸಿರುವುದು ಅವರು ದೊಡ್ಡ ಕಲಾವಿದರ ಜೊತೆಗೆ ತೆಗೆಸಿಕೊಂಡ ಫೋಟೋಗಳು ಮಾತ್ರ. ಮಿಕ್ಕಂತೆ, ಬಡತನ ಅವರ ಬದುಕನ್ನು ಇಂಚಿಂಚಾಗಿ ಕಿತ್ತು ತಿನ್ನುತ್ತಿದೆ. ಸದ್ಯ ಕೊರೊನಾ ಸಂಕಷ್ಟದಿಂದ ಹೆತ್ತ ಮಕ್ಕಳಿಗೆ ಹೊಟ್ಟೆ ತುಂಬ ಊಟ ಹಂಚುವುದೂ ಕಷ್ಟಕರವಾಗಿದೆ. ಮಡದಿಯ ತಾಳಿಯನ್ನೂ ಅಡವಿಟ್ಟು ದಿನಸಿ ತಂದವರು ಅದೆಷ್ಟೋ ಮಂದಿ. ಮನೆ ಬಾಡಿಗೆ ಕಟ್ಟಲು ಕೂಡಾ ಹಣವಿಲ್ಲದೆ ಹೆಣಗಾಡುತ್ತಿದ್ದಾರೆ ಇನ್ನಷ್ಟು ಜನ. ಇಂಥ ಎಷ್ಟೋ ಜನರ ಬಾಳಿನಲ್ಲಿ ರಾಕಿಂಗ್ ಸ್ಟಾರ್ ಯಶ್ ಬೆಳಕು ಮೂಡಿಸಿದ್ದಾರೆ.
ಮೂರು ಸಾವಿರದ ಇನ್ನೂರು ಜನ ಕಾರ್ಮಿಕರು, ಕಲಾವಿದರು, ತಂತ್ರಜ್ಞರಿಗೆ ಯಶ್ ಸಂದಾಯ ಮಾಡಿರುವ ತಲಾ ಐದು ಸಾವಿರ ರೂ.ಗಳು ಹಸಿದ ಹೊಟ್ಟೆಗೆ ಅನ್ನ ನೀಡಿರುವುದರ ಜೊತೆಗೆ ನೊಂದ ಮನಸ್ಸುಗಳಿಗೆ ಸಮಾಧಾನ ತಂದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನೈಜ ಘಟನೆಯನ್ನು ಆಧರಿಸಿ ನಟ, ಪತ್ರಕರ್ತ ಯತಿರಾಜ್ ತಮ್ಮ ಕಲಾವಿದ ಫಿಲ್ಮ್ ಅಕಾಡೆಮಿ ಮೂಲಕ, ಅಣ್ತಮ್ಮ ಎನ್ನುವ ಚೊಕ್ಕದಾದ ಕಿರುಚಿತ್ರವೊಂದನ್ನು ರೂಪಿಸಿದ್ದಾರೆ. ಈ ಚಿತ್ರದ ಕಥಾವಸ್ತು ಎಂಥವರ ಮನಸ್ಸನ್ನೂ ಭಾರವಾಗಿಸುತ್ತದೆ. ಜೊತೆಗೆ, ರಾಕಿಭಾಯ್ ಯಶ್ ಅವರ ಬಗೆಗಿನ ಅಭಿಮಾನ ನೂರ್ಮಡಿಗೊಳಿಸುತ್ತದೆ.