ಮುಂಬೈ:ದಕ್ಷಿಣ ಆಫ್ರಿಕಾ ವಿರುದ್ಧ ಆರಂಭಗೊಳ್ಳಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಮೂರು ಟೆಸ್ಟ್ ಪಂದ್ಯಗಳಿಂದ ಟೀಂ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಹೊರಬಿದ್ದಿದ್ದು, ಅವರ ಸ್ಥಾನಕ್ಕೆ ಮತ್ತೋರ್ವ ವೇಗಿ ಉಮೇಶ್ ಯಾದವ್ ಆಯ್ಕೆಗೊಂಡಿದ್ದಾರೆ.
ದಕ್ಷಿಣ ಆಫ್ರಿಕಾ ನಂತರ ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಯಿಂದಲೂ ಜಸ್ಪ್ರೀತ್ ಬುಮ್ರಾ ಹೊರಕ್ಕೆ!?
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಬಳಿಕ ಬಾಂಗ್ಲಾ ವಿರುದ್ಧ ನಡೆಯಲಿರುವ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ನ ಟೆಸ್ಟ್ ಪಂದ್ಯಗಳಿಂದಲೂ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದೀಗ ಲಭ್ಯವಾಗಿರುವ ಮಾಹಿತಿ ಪ್ರಕಾರ ಈ ವರ್ಷ ಟೀಂ ಇಂಡಿಯಾ ಭಾಗಿಯಾಗಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಯಾವುದೇ ಪಂದ್ಯಗಳಲ್ಲಿ ಬುಮ್ರಾ ಕಣಕ್ಕಿಳಿಯುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಬೆನ್ನುನೋವಿನಿಂದ ಬಳಲುತ್ತಿರುವ ಬುಮ್ರಾ ಇದೀಗ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದು, ದಕ್ಷಿಣ ಆಫ್ರಿಕಾ ನಂತರ ಬಾಂಗ್ಲಾ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಯಲ್ಲೂ ಟಿಂ ಇಂಡಿಯಾವನ್ನ ಪ್ರತಿನಿಧಿಸುವುದು ಬಹುತೇಕ ಅನುಮಾನವಾಗಿದೆ.
ಆಸ್ಟ್ರೇಲಿಯಾದಲ್ಲಿ ಮುಂದಿನ ವರ್ಷ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಗೊಳ್ಳಲಿದ್ದು, ಅದಕ್ಕಾಗಿ ಬುಮ್ರಾ ಸಂಪೂರ್ಣ ಗುಣಮುಖರಾಗಿ ಮೈದಾನಕ್ಕಿಳಿಯಬೇಕಾಗಿದೆ. ಇದೇ ಉದ್ದೇಶದಿಂದ ಅವರಿಗೆ ವಿಶ್ರಾಂತಿ ನೀಡಲು ಆಯ್ಕೆ ಸಮಿತಿ ಮುಂದಾಗಿದ್ದು, ಇದಕ್ಕೆ ಕೋಚ್ ರವಿಶಾಸ್ತ್ರಿ ಹಾಗೂ ಕ್ಯಾಪ್ಟನ್ ವಿರಾಟ್ ಕೊಹ್ಲಿ ಕೂಡ ಸಮ್ಮತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಕಳೆದ ಕೆಲ ತಿಂಗಳಿಂದ ನಿರಂತರವಾಗಿ ಕ್ರಿಕೆಟ್ ಆಡುತ್ತಿರುವ ಕಾರಣ, ಬಾಂಗ್ಲಾ ವಿರುದ್ಧದ ಕ್ರಿಕೆಟ್ ಸರಣಿಯಿಂದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಕೂಡ ಹೊರಗುಳಿಯುವ ಸಾಧ್ಯತೆ ದಟ್ಟವಾಗಿ ಕಂಡು ಬರುತ್ತಿದೆ.