ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ಭೀಕರ ರೈಲು ದುರಂತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಬಾಲಸೋರ್ನಲ್ಲಿ ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಈವರೆಗೆ 261 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಏರಿಕೆಯಾಗುತ್ತಿದೆ. ಸಾವಿರಾರು ಜನರು ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ರಾಜಕೀಯ ಗಣ್ಯರು, ಸಿನಿಮಾ ತಾರೆಯರ ಜೊತೆಗೆ ಕ್ರಿಕೆಟ್ ದಿಗ್ಗಜರು ಕೂಡ ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಟ್ವೀಟ್ ಮಾಡಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರು ಆದಷ್ಟು ಬೇಗನೆ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ವಿರಾಟ್ ಕೊಹ್ಲಿ ಟ್ವೀಟ್:ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಸುದ್ದಿ ಕೇಳಿ ನನಗೆ ತೀವ್ರ ದುಃಖವಾಯಿತು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗಾಗಿ ನಾನು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಟ್ವೀಟ್ ಮಾಡಿದ್ದಾರೆ.
ಗೌತಮ್ ಗಂಭೀರ್ ಪ್ರತಿಕ್ರಿಯೆ:"ಒಡಿಶಾದಲ್ಲಿ ಅಪಾರ ಪ್ರಾಣಹಾನಿ ಸಂಭವಿಸಿದೆ. ಸಂತ್ರಸ್ತ ಕುಟುಂಬಗಳಿಗೆ ದೇವರು ಶಕ್ತಿ ನೀಡಲಿ. ಗಾಯಗೊಂಡವರು ಆದಷ್ಟು ಬೇಗನೆ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಾಷ್ಟ್ರ ನಿಮ್ಮೊಂದಿಗೆ ನಿಂತಿದೆ" ಎಂದು ಟೀಂ ಇಂಡಿಯಾ ಆಟಗಾರ ಗೌತಮ್ ಗಂಭೀರ್ ಟ್ವೀಟ್ ಮಾಡಿ ಸಂತ್ರಸ್ತರಿಗೆ ಧೈರ್ಯ ತುಂಬಿದ್ದಾರೆ.
ಇದನ್ನೂ ಓದಿ:ಒಡಿಶಾ ರೈಲು ದುರಂತ: ಸಹಾಯವಾಣಿ ಆರಂಭ, ಬೆಂಗಳೂರಿನಿಂದ ಹೊರಡುವ ರೈಲುಗಳು ರದ್ದು.. ಹಲವರ ಪರದಾಟ!