ಹೈದರಾಬಾದ್: ಮುಂದಿನ ತಿಂಗಳಿಂದ ಆಸ್ಟ್ರೇಲಿಯಾದಲ್ಲಿ ಆರಂಭಗೊಳ್ಳಲಿರುವ ಬಹುನಿರೀಕ್ಷಿತ ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ತಂಡದಲ್ಲಿ ಅನುಭವಿ ಆಟಗಾರ ದಿನೇಶ್ ಕಾರ್ತಿಕ್ಗೆ ಅವಕಾಶ ನೀಡಲಾಗಿದೆ. ಇದರ ಬೆನ್ನಲ್ಲೇ ಮೊದಲ ಪ್ರತಿಕ್ರಿಯೆ ನೀಡಿರುವ ಅವರು, 'ಕನಸು ನನಸಾಗಿದೆ' ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
2022ರಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್ಗೆ ಕಮ್ಬ್ಯಾಕ್ ಮಾಡಿರುವ ದಿನೇಶ್ ಕಾರ್ತಿಕ್ ತಂಡದಲ್ಲಿ ಫಿನಿಶರ್ ಪಾತ್ರ ನಿರ್ವಹಿಸುತ್ತಿದ್ದಾರೆ. ಜೊತೆಗೆ ವೆಸ್ಟ್ ಇಂಡೀಸ್, ದಕ್ಷಿಣ ಆಫ್ರಿಕಾ ಸೇರಿದಂತೆ ವಿವಿಧ ಸರಣಿಗಳಲ್ಲೂ ಅವಕಾಶ ನೀಡಲಾಗಿತ್ತು. ಇದಾದ ಬಳಿಕ ಏಷ್ಯಾಕಪ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದ ಡಿಕೆ ಇದೀಗ ಟಿ20 ವಿಶ್ವಕಪ್ನಲ್ಲೂ ಮೈದಾನಕ್ಕಿಳಿಯಲಿದ್ದಾರೆ. ಈ ಮೂಲಕ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಲು ಮತ್ತೊಮ್ಮೆ ಸಜ್ಜಾಗಿದ್ದಾರೆ.
ಟೀಂ ಇಂಡಿಯಾ ಪರ ಹಿಂದೆ 2007ರಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಪಂದ್ಯವನ್ನಾಡಿದ್ದ ದಿನೇಶ್ ಕಾರ್ತಿಕ್ ತನದಂತರ 2013ರ ಐಸಿಸಿ ಚಾಂಪಿಯನ್ ಟ್ರೋಫಿಯಲ್ಲೂ ಅವಕಾಶ ಪಡೆದುಕೊಂಡಿದ್ದರು. ವಿಶೇಷವೆಂದರೆ ಈ ಎರಡು ಟೂರ್ನಿಗಳಲ್ಲಿ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. 2004ರಲ್ಲಿ ಟೀಂ ಇಂಡಿಯಾ ಪರ ಪದಾರ್ಪಣೆ ಮಾಡಿರುವ ದಿನೇಶ್ ಕಾರ್ತಿಕ್, ಅನೇಕ ಏಳು-ಬೀಳು ಕಂಡಿದ್ದಾರೆ. ತಂಡದಲ್ಲಿ ಅವಕಾಶ ಸಿಗದ ಸಂದರ್ಭದಲ್ಲಿ ಕಾಮೆಂಟರ್ ಆಗಿ ಕಾರ್ಯನಿರ್ವಹಿಸಿರುವ ಕಾರ್ತಿಕ್, ಇದೀಗ ಮತ್ತೊಮ್ಮೆ ಟೀಂನಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.