ಅಬುಧಾಬಿ: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೂಪರ್12 ಹಂತದಲ್ಲಿ ಭಾರತ ಇಂದು ತನ್ನ ಮೂರನೇ ಪಂದ್ಯದಲ್ಲಿ ಅಫ್ಘಾನಿಸ್ಥಾನದ ವಿರುದ್ಧ ಸೆಣಸಲಿದೆ. ಮೊದಲೆರೆಡು ಪಂದ್ಯಗಳನ್ನು ಅತ್ಯಂತ ಹೀನಾಯವಾಗಿ ಸೋತಿರುವ ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶಿಸಲು ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
ಟೀಂ ಇಂಡಿಯಾ ಆಡಿರುವ ಮೊದಲೆರಡು ಪಂದ್ಯಗಳಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಕಳಪೆ ಪ್ರದರ್ಶನವೇ ತಂಡದ ಸೋಲಿಗೆ ಪ್ರಮುಖ ಕಾರಣವಾಗಿತ್ತು. ಪಾಕ್ ವಿರುದ್ಧದ ಮೊದಲ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಬಿಟ್ಟರೆ ಉಳಿದ ಬ್ಯಾಟರ್‌ಗಳು ರನ್ ಗಳಿಸಲು ಪರದಾಡಿದರು. ಇನ್ನು, ಬೌಲಿಂಗ್ ವಿಭಾಗದಲ್ಲೂ ಕೂಡಾ ಯಾವೊಬ್ಬ ಬೌಲರ್ಗಳೂ ವಿಕೆಟ್ ಪಡೆಯಲಿಲ್ಲ.
ನ್ಯೂಜಿಲ್ಯಾಂಡ್ ವಿರುದ್ಧದ 2ನೇ ಪಂದ್ಯದಲ್ಲಿ ತಂಡದಲ್ಲಿ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿದಿದ್ದ ಟೀಂ ಇಂಡಿಯಾ, ಈ ಪಂದ್ಯದಲ್ಲೂ ರನ್ ಗಳಿಸಲು ಪರದಾಡಿತು. ಈ ಪಂದ್ಯದಲ್ಲಿ ಸೂರ್ಯಕುಮಾರ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದ ಇಶಾನ್ ಕಿಶನ್ ಸಿಕ್ಕ ಅವಕಾಶ ಸದುಪಯೋಗ ಪಡಿಸಿಕೊಳ್ಳುವಲ್ಲಿ ವಿಫಲರಾದರು. ಅನುಭವಿ ಬೌಲರ್ ಭುವನೇಶ್ವರ್ ಕುಮಾರ್ ಬದಲಿಗೆ ಸ್ಥಾನ ಪಡೆದಿದ್ದ ಶಾರ್ದೂಲ್ ಠಾಕೂರ್ ಕೂಡ ಪ್ಲಾಪ್ ಆದರು. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ 23, ಹಾಗೂ ಜಡೇಜಾ 26 ರನ್ ಬಿಟ್ಟರೆ ಉಳಿದ ಬ್ಯಾಟರ್‌ಗಳು ರನ್ ಗಳಿಸಲು ಅಶಕ್ತರಾದರು.
ಇಂದು ಅಫ್ಘಾನಿಸ್ಥಾನದ ವಿರುದ್ಧ ನಡೆಯಲಿರುವ ಪಂದ್ಯ ಟೀಂ ಇಂಡಿಯಾಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಭಾರತ ತಂಡವು ಹಲವು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಇದ್ದು ಅಶ್ವಿನ್ ಹಾಗೂ ಸೂರ್ಯಕುಮಾರ್ ಯಾದವ್ ತಂಡದಲ್ಲಿ ಅವಕಾಶ ಪಡೆಯುವ ಸಾಧ್ಯತೆ ಇದೆ. ಸೂರ್ಯಕುಮಾರ್ ಯಾದವ್ ಕಳೆದ ಪಂದ್ಯದಲ್ಲಿ ಫಿಟ್ನೆಸ್ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದರು. ಇಂದು ಫಿಟ್ ಆದರೆ ಆಡುವ 11ರ ಬಳಗದಲ್ಲಿ ಸ್ಥಾನ ಪಡೆಯುವುದು ಖಚಿತ.
ಇನ್ನು ಅಫ್ಘಾನಿಸ್ಥಾನವನ್ನು ಹಗುರುವಾಗಿ ಪರಿಗಣಿಸುವಂತಿಲ್ಲ. ಈಗಾಗಲೇ ನಮೀಬಿಯಾ ಮತ್ತು ಸ್ಕಾಟ್ಲೆಂಡ್ ವಿರುದ್ಧ ಜಯಗಳಿಸಿದ್ದು, ಪಾಯಿಂಟ್ಸ್ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಅಫ್ಘನ್ ಕಳೆದ ಪಂದ್ಯದಲ್ಲಿ ಪಾಕ್ ತಂಡಕ್ಕೆ ಪ್ರಬಲ ಪೈಪೋಟಿ ನೀಡಿ ಸೋಲು ಕಂಡಿದ್ದನ್ನು ಇಲ್ಲಿ ಮರೆಯುವಂತಿಲ್ಲ.