ದುಬೈ: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.
ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ತಂಡ, ಕಳೆದ ಪಂದ್ಯದಲ್ಲಿ ಸನ್‌ರೈಸರ್ಸ್ ವಿರುದ್ಧ 10 ವಿಕೆಟ್‌ಗಳಿಂದ ಹೀನಾಯ ಸೋಲು ಅನುಭವಿಸಿತ್ತು. ಆದರೆ, ಪ್ರಮುಖ ಬೌಲರ್ಗಳು ಅಂದಿನ ಪಂದ್ಯದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಹೀಗಾಗಿ ಇಂದಿನ ಪಂದ್ಯದಲ್ಲಿ ಬುಮ್ರಾ, ಬೋಲ್ಟ್ ಕಣಕ್ಕಿಳಿಯಲಿದ್ದಾರೆ.
ಇತ್ತ ಬ್ಯಾಟಿಂಗ್ನಲ್ಲಿ ಮುಂಬೈ ಬಲಿಷ್ಠವಾಗಿದೆ, ನಾಯಕ ರೋಹಿತ್, ಡಿ ಕಾಕ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಪೊಲಾರ್ಡ್, ಹಾರ್ದಿಕ್ ಪಾಂಡ್ಯ ಭರ್ಜರಿ ಫಾರ್ಮ್ನಲ್ಲಿದ್ದು, ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ತೋರಿದ್ದಾರೆ.
ಬೌಲಿಂಗ್ನಲ್ಲಿ ಯಾರ್ಕರ್ ಸ್ಪೆಷಲಿಸ್ಟ್ ಬುಮ್ರಾ, ಟ್ರೆಂಟ್ ಬೌಲ್ಟ್, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹಾರ್ ಅದ್ಭುತವಾಗಿ ಸ್ಪೆಲ್ ಮಾಡುತ್ತಿದ್ದು, ಇಂದಿನ ಪಂದ್ಯದಲ್ಲಿ ಡೆಲ್ಲಿ ಹುಡುಗರನ್ನು ಕಟ್ಟಿಹಾಕುವ ವಿಶ್ವಾಸದಲ್ಲಿದೆ. ಪ್ರಸಕ್ತ ಆವೃತ್ತಿಯ ಲೀಗ್ ಹಂತದಲ್ಲಿ ಮುಂಬೈ ಇಂಡಿಯನ್ಸ್ ಎರಡೂ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವು ಸಾಧಿಸಿತ್ತು.
ಲೀಗ್ ಹಂತದ ಕೊನೇಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಜಯ ಗಳಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ಇಂದು ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಲು ಸಜ್ಜಾಗಿದೆ. ಕಳೆದ ಕೆಲ ಪಂದ್ಯಗಳಲ್ಲಿ ವೈಫಲ್ಯ ಕಂಡಿದ್ದ ಧವನ್ ಮತ್ತು ರಹಾನೆ ಲಯ ಕಂಡುಕೊಂಡಿರುವುದು ಡೆಲ್ಲಿಯ ಆತ್ಮವಿಶ್ವಾಸ ಹೆಚ್ಚಿಸಿದೆ.
ಕ್ಯಾಪಿಟಲ್ಸ್ ಬೌಲಿಂಗ್ ಪಡೆ ಉತ್ತಮವಾಗಿದೆ ಕಗಿಸೊ ರಬಾಡ, ನೋರ್ಟ್ಜೆ, ಅಕ್ಸರ್ ಪಟೇಲ್, ಆರ್.ಅಶ್ವಿನ್, ಸ್ಟೋಯ್ನಿಸ್ ಎದುರಾಳಿಗಳನ್ನು ಕಟ್ಟಿಹಾಕುವ ಸಾಮರ್ಥ್ಯ ಹೊಂದಿದ್ದಾರೆ. ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡ 2020ರ ಇಂಡಿಯನ್ ಪ್ರೀಮಿಯರ್ ಲೀಗ್ನ ಫೈನಲ್ ಹಂತಕ್ಕೆ ಎಂಟ್ರಿ ಕೊಡಲಿದೆ.