ಅಬುಧಾಬಿ:ಇಂದು ಸಂಜೆ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ನ ಎರಡನೇ ಪಂದ್ಯದಲ್ಲಿ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.
ಉಭಯ ತಂಡಗಳು 2020 ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿವೆ. ಡೆಲ್ಲಿ ತಂಡ ಆಡಿರುವ 6 ಪಂದ್ಯಗಳ ಪೈಕಿ 5ರಲ್ಲಿ ಜಯ ಸಾಧಿಸಿದ್ರೆ, ಮುಂಬೈ ತಂಡ 6 ಪಂದ್ಯಗಳಲ್ಲಿ ನಾಲ್ಕರಲ್ಲಿ ಜಯ ಸಾಧಿಸಿದೆ.
ಇತ್ತ ಶ್ರೇಯಸ್ ಐಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಬ್ಯಾಟಿಂಗ್ ಪಡೆ ಬಲಿಷ್ಠವಾಗಿದೆ. ಪೃಥ್ವಿ ಶಾ, ಶ್ರೇಯಸ್ ಅಯ್ಯರ್, ಶಿಖರ್ ಧವನ್, ರಿಷಭ್ ಪಂತ್ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ.
ಒಂದು ವೇಳೆ ಅಗ್ರ ಕ್ರಮಾಂಕದ ಆಟಗಾರರು ಉತ್ತಮ ಸ್ಕೋರ್ ಕಲೆ ಹಾಕಲು ವಿಫಲರಾದ್ರೆ ಮಧ್ಯಮ ಕ್ರಮಾಂಕದಲ್ಲಿ ಮಾರ್ಕಸ್ ಸ್ಟೋಯ್ನಿಸ್ ಮತ್ತು ಹೆಟ್ಮೆಯರ್ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಬೌಲಿಂಗ್ ವಿಭಾಗದಲ್ಲೂ ಕ್ಯಾಪಿಟಲ್ಸ್ ಮೇಲುಗೈ ಹೊಂದಿದೆ. ಕಗಿಸೊ ರಬಾಡ, ಎನ್ರಿಚ್ ನೋರ್ಟ್ಜೆ, ಹರ್ಷಲ್ ಪಟೇಲ್ ಮತ್ತು ಸ್ಪಿನ್ನರ್ ಆರ್.ಅಶ್ವಿನ್, ಸ್ಟೋಯ್ನಿಸ್ ಡೀಸೆಂಟ್ ಸ್ಪೆಲ್ ಮಾಡುತ್ತಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡದಲ್ಲಿ ಬಹುತೇಕ ಬ್ಯಾಟ್ಸ್‌ಮನ್‌ಗಳು ಉತ್ತಮ ಫಾರ್ಮ್‌ನಲ್ಲಿದ್ದು, ತಂಡಕ್ಕೆ ನೆರವಾಗುತ್ತಿದ್ದಾರೆ. ಡಿ ಕಾಕ್, ರೋಹಿತ್, ಸೂರ್ಯಕುಮಾರ್ ಯಾದವ್, ಪೊಲಾರ್ಡ್ ಹಾರ್ದಿಕ್ ಪಾಂಡ್ಯ ಮುಂಬೈನ ಬ್ಯಾಟಿಂಗ್ ಬಲ.
ಬೌಲಿಂಗ್ನಲ್ಲೂ ಮುಂಬೈ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಯಾರ್ಕರ್ ಸ್ಪೆಷಲಿಸ್ಟ್ ಬುಮ್ರಾ, ಟ್ರೆಂಟ್ ಬೌಲ್ಟ್, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹರ್ ಅದ್ಭುತವಾಗಿ ಸ್ಪೆಲ್ ಮಾಡುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ರಾಜಸ್ಥಾನ ತಂಡವನ್ನು ಕೇವಲ 136 ರನ್ ಗಳಿಗೆ ನಿಯಂತ್ರಿಸಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ರು.
ಉಭಯ ತಂಡಗಳು ಇಲ್ಲಿಯವರೆಗೆ 24 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 12 ಪಂದ್ಯಗಳಲ್ಲಿ ಮುಂಬೈ ತಂಡ ಗೆಲುವು ಕಂಡಿದ್ರೆ, 12 ಪಂದ್ಯಗಳಲ್ಲಿ ಡೆಲ್ಲಿ ತಂಡ ಜಯ ಸಾಧಿಸಿದೆ.