ಮುಂಬೈ:ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅತಿ ಯಶಸ್ವಿ ತಂಡಗಳಲ್ಲಿ ಒಂದಾಗಿರುವ ಮುಂಬೈ ಇಂಡಿಯನ್ಸ್ ಈ ಸಲದ ಸೀಸನ್ನಲ್ಲಿ ಸಂಪೂರ್ಣವಾಗಿ ನೆಲಕಚ್ಚಿದ್ದು, ತಾನು ಆಡಿರುವ ಎಲ್ಲ ಪಂದ್ಯಗಳಲ್ಲೂ ಸೋಲು ಕಂಡು ಮುಖಭಂಗಕ್ಕೊಳಗಾಗಿದೆ. ಹೀಗಾಗಿ, ತಂಡದ ನಾಯಕನಾಗಿರುವ ರೋಹಿತ್ ಶರ್ಮಾ ಬದಲಿಗೆ ಬೇರೆ ಆಟಗಾರನಿಗೆ ನಾಯಕತ್ವದ ಜವಾಬ್ದಾರಿ ನೀಡಲು ಫ್ರಾಂಚೈಸಿ ಚಿಂತನೆ ನಡೆಸಿದೆ ಎನ್ನಲಾಗ್ತಿದೆ.
ಕಳಪೆ ಬ್ಯಾಟಿಂಗ್ ಫಾರ್ಮ್ನಿಂದ ವೈಫಲ್ಯ ಅನುಭವಿಸುತ್ತಿರುವ ರೋಹಿತ್ ಶರ್ಮಾ ಅವರ ಪ್ರದರ್ಶನ ತಂಡದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಿದ್ದು, ಇದೀಗ ಅವರ ಸ್ಥಾನವನ್ನು ವೇಗಿ ಜಸ್ಪ್ರೀತ್ ಬುಮ್ರಾ ಅಥವಾ ಸೂರ್ಯಕುಮಾರ್ ಯಾದವ್ಗೆ ನೀಡಲು ಚಿಂತನೆ ನಡೆಸಿದೆ ಎಂಬ ಮಾತು ಕೇಳಿ ಬಂದಿದೆ. ಟೀಂ ಇಂಡಿಯಾ ಪರ ಈಗಾಗಲೇ ಕೆಲವೊಂದು ಪಂದ್ಯಗಳಲ್ಲಿ ಉಪನಾಯಕನ ಜವಾಬ್ದಾರಿ ನಿರ್ವಹಿಸಿರುವ ಬುಮ್ರಾ ಹಾಗೂ ತಂಡದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಸೂರ್ಯಕುಮಾರ್ ಯಾದವ್ಗೆ ನಾಯಕನ ಜವಾಬ್ದಾರಿ ನೀಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಇದರ ಜೊತೆಗೆ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ಗೂ ಅವಕಾಶ ಸಿಗುವ ಸಾಧ್ಯತೆ ಇದೆ.