ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಮತ್ತು ಐಪಿಎಲ್‌ನಲ್ಲಿ ಸಿಎಸ್‌ಕೆ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ತಮ್ಮ ಪತ್ನಿ ರಿವಾಬಾ ಜಡೇಜಾ ಜೊತೆ ಪ್ರಧಾನಿ ನಿವಾಸಕ್ಕೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ರಿವಾಬಾ ಜಡೇಜಾ ಇತ್ತೀಚೆಗೆ ನಡೆದ ಗುಜರಾತ್ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ಬಿಜೆಪಿ ಶಾಸಕಿಯಾಗಿದ್ದಾರೆ. ಗುಜರಾತ್‌ನ ಜಾಮ್‌ನಗರ ಉತ್ತರ ಕ್ಷೇತ್ರದಿಂದ ಗೆದ್ದು ಮೊದಲ ಬಾರಿಗೆ ಶಾಸಕಿಯಾಗಿದ್ದಾರೆ. ರವೀಂದ್ರ ಜಡೇಜಾ ಮತ್ತು ರಿವಾಬಾ ತಮ್ಮ ಇನ್‌ಸ್ಟಾಗ್ರಾಮ್, ಟ್ವಿಟರ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
'ಪ್ರಧಾನಿ ನರೇಂದ್ರ ಮೋದಿ ಸರ್ ಅವರನ್ನು ಭೇಟಿ ಮಾಡಿದ್ದು ತುಂಬಾ ಖುಷಿ ತಂದಿದೆ. ನಮ್ಮ ತಾಯ್ನಾಡಿಗಾಗಿ ನೀವು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವಕ್ಕೆ ಅತ್ಯುತ್ತಮ ಉದಾಹರಣೆಯಾಗಿದ್ದೀರಿ. ನೀವು ಸಾಧ್ಯವಾದಷ್ಟು ಉತ್ತಮ ರೀತಿಯಲ್ಲಿ ಎಲ್ಲರಿಗೂ ಸ್ಫೂರ್ತಿ ನೀಡುವುದನ್ನು ಮುಂದುವರಿಸುತ್ತೀರಿ ಎಂದು ನನಗೆ ಖಾತ್ರಿಯಿದೆ' ಎಂದು ರವೀಂದ್ರ ಜಡೇಜಾ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ರಿವಾಬಾ ಜಡೇಜಾ,'ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವುದು ಎಂದರೆ ಅನಂತ ಸಾಮರ್ಥ್ಯವನ್ನು ಭೇಟಿಯಾದಂತೆ ಮತ್ತು ಅನಂತ ಸಾಧ್ಯತೆಗಳನ್ನು ಸಾಧ್ಯವಾಗಿಸಲು ನಿರ್ದೇಶನ ಮತ್ತು ಶಕ್ತಿಯನ್ನು ಪಡೆಯುವುದು. ನಿಮ್ಮ ಮಾರ್ಗದರ್ಶನ ಯಾವಾಗಲೂ ಸ್ಫೂರ್ತಿ ನೀಡುತ್ತದೆ. ಭೇಟಿಗೆ ಸಮಯ ನೀಡಿದ ಪ್ರಧಾನಿ ಮೋದಿಯವರಿಗೆ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ಶರ್ಟ್ ಮೇಲೆ ಧೋನಿಯ ಹಸ್ತಾಕ್ಷರ ಪಡೆದದ್ದು ನನಗೆ ಭಾವನಾತ್ಮಕ ಕ್ಷಣ: ಸುನಿಲ್ ಗವಾಸ್ಕರ್