ಇಸ್ಲಾಮಾಬಾದ್ (ಪಾಕಿಸ್ತಾನ): ಭಾರತ ಆತಿಥ್ಯ ವಹಿಸಲಿರುವ ಮುಂಬರುವ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಪಾಕ್ ಸರ್ಕಾರ ಇಂದು ಅನುಮತಿ ನೀಡಿದೆ. ಭಾರತ- ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧಗಳು ಚೆನ್ನಾಗಿರದ ಕಾರಣ ಪಾಕಿಸ್ತಾನ ತಂಡ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾಗವಹಿಸುವುದು ಅನುಮಾನ ಎಂದೇ ಹೇಳಲಾಗಿತ್ತು. ಈ ಬೆನ್ನಲ್ಲೇ ಇದೀಗ ಪಾಕ್ ಸರ್ಕಾರ ತನ್ನ ಕ್ರಿಕೆಟ್ ತಂಡವನ್ನು ಭಾರತಕ್ಕೆ ಕಳುಹಿಸುವುದಾಗಿ ಹೇಳಿದೆ.
ಈ ಬಗ್ಗೆ ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆ ಹೊರಡಿಸಿದೆ. "ಪಾಕಿಸ್ತಾನವು ಕ್ರೀಡೆಯನ್ನು ರಾಜಕೀಯದೊಂದಿಗೆ ಬೆರೆಸಬಾರದು ಎಂದು ಭಾವಿಸಿದೆ. ಆದ್ದರಿಂದ ಭಾರತದಲ್ಲಿ ನಡೆಯಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರಲ್ಲಿ ಭಾಗವಹಿಸಲು ತನ್ನ ಕ್ರಿಕೆಟ್ ತಂಡವನ್ನು ಕಳುಹಿಸಲು ನಿರ್ಧರಿಸಲಾಗಿದೆ" ಎಂದು ತಿಳಿಸಿದೆ.
ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧಗಳು ಅಂತಾರಾಷ್ಟ್ರೀಯ ಕ್ರೀಡಾ ಸಂಬಂಧಿತ ವಿಷಯಗಳಲ್ಲಿ ಅಡ್ಡಿಯಾಗಬಾರದು. ಪಾಕಿಸ್ತಾನದ ಈ ನಿರ್ಧಾರವು ತನ್ನ ರಚನಾತ್ಮಕ ಮತ್ತು ಜವಾಬ್ದಾರಿಯುತ ವರ್ತನೆಯನ್ನು ಅಭಿವ್ಯಕ್ತಪಡಿಸುತ್ತಿದೆ. ಇದರ ಜೊತೆಗೆ ಭಾರತದ ನಿಷ್ಠುರ ಮನೋಭಾವವನ್ನು ಎತ್ತಿ ತೋರಿಸುತ್ತದೆ. ಏಕೆಂದರೆ ಭಾರತವು ಏಷ್ಯಾ ಕಪ್ಗಾಗಿ ತನ್ನ ಕ್ರಿಕೆಟ್ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ನಿರಾಕರಿಸಿತ್ತು ಎಂದು ದೂರಿದೆ.
ಜೂನ್‌ನಲ್ಲಿ ಬಿಡುಗಡೆಯಾದ ವೇಳಾಪಟ್ಟಿಯ ಪ್ರಕಾರ, ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ರನ್ನರ್ ಅಪ್ ನ್ಯೂಜಿಲೆಂಡ್ ನಡುವಿನ ಆರಂಭಿಕ ಪಂದ್ಯವು ಅಕ್ಟೋಬರ್ 5ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಗಳು ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಭಾರತದ ವಿವಿಧೆಡೆ ನಡೆಯಲಿದೆ. ವಿಶ್ವಕಪ್‌ನಲ್ಲಿ ಹತ್ತು ತಂಡಗಳು ಭಾಗವಹಿಸಲಿವೆ.
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂದ್ಯಾವಳಿಯ ಆರಂಭಿಕ ಮತ್ತು ಅಂತಿಮ ಪಂದ್ಯವನ್ನು ಆಯೋಜಿಸಲಾಗಿದ್ದು, 46 ದಿನಗಳ ಕಾಲ 48 ಪಂದ್ಯಗಳು ನಡೆಯಲಿವೆ. ಅಕ್ಟೋಬರ್ 8 ರಂದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ- ಭಾರತ ನಡುವೆ ಪಂದ್ಯ ನಡೆಯಲಿದೆ. ಬಳಿಕ ಅಕ್ಟೋಬರ್ 15ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ತಂಡಗಳು ಸೆಣಸಾಟ ನಡೆಸಲಿವೆ.
ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ನಾಲ್ಕು ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆಯಲಿವೆ. ಮೊದಲ ಸೆಮಿಫೈನಲ್ ಪಂದ್ಯ ನವೆಂಬರ್ 15ರಂದು ಮುಂಬೈನಲ್ಲಿ ನಡೆಯಲಿದ್ದು, ಎರಡನೇ ಸೆಮಿಫೈನಲ್ ಪಂದ್ಯ ನವೆಂಬರ್ 16ರಂದು ಕೋಲ್ಕತ್ತಾದಲ್ಲಿ ನಡೆಯಲಿದೆ. ಫೈನಲ್ ಪಂದ್ಯವು ನವೆಂಬರ್ 19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಿಗದಿಯಾಗಿದೆ.
ಇದನ್ನೂ ಓದಿ :Rohit Sharma: 2024ರ ಟಿ20 ವಿಶ್ವಕಪ್ ಆಡ್ತಾರಾ ರೋಹಿತ್ ಶರ್ಮಾ? ಏನ್ ಹೇಳಿದ್ರು ಹಿಟ್‌ಮ್ಯಾನ್?