ಲಾಹೋರ್(ಪಾಕಿಸ್ತಾನ):29 ವರ್ಷಗಳ ಬಳಿಕ ಆಸ್ಟ್ರೇಲಿಯಾ ತಂಡ ಪಾಕಿಸ್ತಾನ ಪ್ರವಾಸ ಕೈಗೊಂಡು ಕ್ರಿಕೆಟ್ ಸರಣಿಯಲ್ಲಿ ಭಾಗಿಯಾಗಿದೆ. ಇದರ ಮಧ್ಯೆ ಪಾಕಿಸ್ತಾನದಲ್ಲಿ ರಾಜಕೀಯ ತೀವ್ರ ಕೋಲಾಹಲ ಉದ್ಭವವಾಗಿದ್ದು, ಉಭಯ ತಂಡಗಳ ನಡುವಿನ ಏಕದಿನ ಮತ್ತು ಟಿ20 ಕ್ರಿಕೆಟ್ ಸರಣಿಯನ್ನು ಲಾಹೋರ್ಗೆ ಸ್ಥಳಾಂತರ ಮಾಡಲಾಗಿದೆ.
ಪಾಕಿಸ್ತಾನದ ಆಡಳಿತಾರೂಢ ತೆಹ್ರೀಕ್-ಇ-ಇನ್ಸಾಫ್ ಪಕ್ಷದ 24 ಸದಸ್ಯರು ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ತಿರುಗಿಬಿದ್ದಿದ್ದು, ಪಿಎಂ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಲು ಮುಂದಾಗಿದ್ದಾರೆ. ಹೀಗಾಗಿ ಪಾಕಿಸ್ತಾನದಲ್ಲಿ ತೀವ್ರ ರಾಜಕೀಯ ಕೋಲಾಹಲ ಉಂಟಾಗಿದೆ. ಇಸ್ಲಾಮಾಬಾದ್ನಲ್ಲಿ ಹಿಂಸಾತ್ಮಕ ಕೃತ್ಯಗಳು ನಡೆಯುವ ಸಾಧ್ಯತೆ ಇರುವ ಕಾರಣ ರಾವಲ್ಪಿಂಡಿಯಿಂದ ಲಾಹೋರ್ಗೆ ಇದೀಗ ಕ್ರಿಕೆಟ್ ಸರಣಿ ಶಿಫ್ಟ್ ಮಾಡಲಾಗಿದೆ ಎಂದು ವಿದೇಶಾಂಗ ಸಚಿವ ಶೇಖ್ ರಶೀದ್ ಅಹ್ಮದ್ ತಿಳಿಸಿದ್ದಾರೆ.
ಮಾರ್ಚ್ 29ರಿಂದ ರಾವಲ್ಪಿಂಡಿಯಲ್ಲಿ ಪಾಕ್-ಆಸ್ಟ್ರೇಲಿಯಾ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಏಕೈಕ ಟಿ20 ಪಂದ್ಯ ಆರಂಭಗೊಳ್ಳಬೇಕಾಗಿತ್ತು. ಆದರೆ, ಇದೀಗ ಲಾಹೋರ್ಗೆ ಶಿಫ್ಟ್ ಮಾಡಲಾಗುತ್ತಿದ್ದು, ಲಾಹೋರ್ನ ಗಡಾಫಿ ಸ್ಟೇಡಿಯಂನಲ್ಲಿ ಪಂದ್ಯಗಳು ನಡೆಯಲಿವೆ.