ಶಾರ್ಜಾ: ಗ್ಲೇನ್ ಮ್ಯಾಕ್ಸ್ವೆಲ್ ಅವರ ಸ್ಫೋಟಕ ಅರ್ಧಶತಕ ಮತ್ತು ಬೌಲರ್ಗಳ ಸಂಘಟಿತ ಪ್ರದರ್ಶನದ ಮೂಲಕ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಎದುರಾಳಿ ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್ಗಳ ರೋಚಕ ಜಯ ಸಾಧಿಸಿ 14ನೇ ಆವೃತ್ತಿಯಲ್ಲಿ ಮೂರನೇ ತಂಡವಾಗಿ ಪ್ಲೇ ಆಫ್ ಪ್ರವೇಶಿಸಿದೆ.
ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್ ಗ್ಲೇನ್ ಮ್ಯಾಕ್ಸ್ವೆಲ್ 57(33 ಎಸೆತ, 3 ಬೌಂಡರಿ, 4 ಸಿಕ್ಸರ್) ಮತ್ತು ಆರಂಭಿಕ ದೇವದತ್ ಪಡಿಕ್ಕಲ್ ಅವರ 40ರನ್ಗಳ ನೆರವಿನಿಂದ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 164 ರನ್ಗಳ ಸವಾಲಿನ ಮೊತ್ತ ದಾಖಲಿಸಿತ್ತು.
ಅದ್ಭುತ ಬೌಲಿಂಗ್ ಪ್ರದರ್ಶನ ತೋರಿದ ಮೋಯಿಸಸ್ ಹೆನ್ರಿಕ್ಸ್ 12ರನ್ ನೀಡಿ 3 ವಿಕೆಟ್ ಹಾಗೂ ಮೊಹಮ್ಮದ್ ಶಮಿ 39 ರನ್ ನೀಡಿ 3 ವಿಕೆಟ್ ಪಡೆದರು.
ಇನ್ನು 165 ರನ್ಗಳ ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನಟ್ಟಿದ ರಾಹುಲ್ ಬಳಗ ಎಂದಿನಂತೆ 91 ರನ್ಗಳ ಆರಂಭಿಕ ಜೊತೆಯಾಟ ನಡೆಸಿಯೂ ಮಧ್ಯಮ ಕ್ರಮಾಂಕದ ವೈಫಲ್ಯದಿಂದ ಸೋಲು ಕಂಡಿತು.
ರಾಹುಲ್ 35 ಎಸೆತಗಳಲ್ಲಿ 1 ಬೌಂಡರಿ, ಸಿಕ್ಸರ್ ಸಹಿತ 39 ರನ್ ಗಳಿಸಿ ಶಹ್ಬಾಜ್ಗೆ ವಿಕೆಟ್ ಒಪ್ಪಿಸಿದರು. ಇವರ ಬೆನ್ನಲ್ಲೇ ಮತ್ತೊಮ್ಮೆ ವೈಫಲ್ಯ ಅನುಭವಿಸಿದ ವಿಂಡೀಸ್ ಬ್ಯಾಟರ್ ನಿಕೋಲಸ್ ಪೂರನ್ ಕೇವಲ 3 ರನ್ಗಳಿಸಿ ವಿಕೆಟ್ ಒಪ್ಪಿಸಿ ನಿರಾಶೆ ಮೂಡಿಸಿದರು.