ಮೆಲ್ಬೋರ್ನ್ (ಆಸ್ಟ್ರೇಲಿಯಾ): ಟಿ20 ವಿಶ್ವಕಪ್ ಟೂರ್ನಿಯಲ್ಲಿ ನವೆಂಬರ್ 6ರಂದು ಭಾರತ ಮತ್ತು ಜಿಂಬಾಬ್ವೆ ನಡುವೆ ಮಹತ್ವದ ಪಂದ್ಯ ನಡೆಯಲಿದೆ. ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಜಿಂಬಾಬ್ವೆ ತಂಡವನ್ನು ಟೀಂ ಇಂಡಿಯಾ ಎದುರಿಸಲಿದೆ. ಇದು ಟೀಂ ಇಂಡಿಯಾ ಆಟಗಾರರ ಪಾಲಿಗೆ ನೆಚ್ಚಿನ ಮೈದಾನವಾಗಿದೆ.
ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಭಾರತ ಕ್ರಿಕೆಟ್ ತಂಡ ಇದುವರೆಗೆ ಒಟ್ಟು 5 ಟಿ-20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಆಸ್ಟ್ರೇಲಿಯಾ ವಿರುದ್ಧದದ ಒಂದು ಪಂದ್ಯವನ್ನು ಮಾತ್ರ ಸೋತಿದೆ. 3 ಪಂದ್ಯಗಳನ್ನು ಅದ್ಭುತ ರೀತಿಯಲ್ಲಿ ಗೆದ್ದಿದೆ. ಎರಡು ಬಾರಿ ಆಸ್ಟ್ರೇಲಿಯಾ ಮತ್ತು ಒಮ್ಮೆ ಪಾಕಿಸ್ತಾನವನ್ನು ಟೀಂ ಇಂಡಿಯಾ ಸೋಲಿಸಿದೆ. ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು.
2008ರಲ್ಲಿ ಮೊದಲ ಪಂದ್ಯ: ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ 2008ರ ಫೆಬ್ರವರಿ 1ರಂದು ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯವನ್ನು ಆಡಿತ್ತು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್‌ನಲ್ಲಿ ಸಂಪೂರ್ಣ ವಿಫಲವಾಗಿ 17.3 ಓವರ್‌ಗಳಲ್ಲಿ ಆಲೌಟ್ ಆಗಿ ಕೇವಲ 74 ರನ್ ಗಳಿಸಲಷ್ಟೇ ಶಕ್ತವಾಗಿತ್ತು. ಆಸ್ಟ್ರೇಲಿಯಾ ತಂಡ 9 ವಿಕೆಟ್‌ಗಳಿಂದ ಗೆಲುವು ಸಾಧಿಸಿತ್ತು.
ಎರಡನೇ ಪಂದ್ಯದಲ್ಲಿ ಸೋಲಿನ ಸೇಡು:ಇದಾದ ನಾಲ್ಕು ವರ್ಷಗಳ ಬಳಿಕ 2012ರ ಫೆಬ್ರವರಿ 3ರಂದು ಎರಡನೇ ಟಿ-20 ಪಂದ್ಯವನ್ನು ಟೀಂ ಇಂಡಿಯಾ ಆಡಿತ್ತು. ಈ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾವನ್ನು 8 ವಿಕೆಟ್‌ಗಳಿಂದ ಸೋಲಿಸಿ ಮೊದಲ ಸೋಲಿನ ಸೇಡು ತೀರಿಸಿಕೊಂಡಿತ್ತು. ಆಸ್ಟ್ರೇಲಿಯಾ ನೀಡಿದ್ದ 131 ರನ್ಗಳ ಗುರಿಯನ್ನು ಟೀಂ ಇಂಡಿಯಾ ಕೇವಲ 2 ವಿಕೆಟ್ ಕಳೆದುಕೊಂಡು ತಲುಪಿತ್ತು.
ಮೂರನೇ ಬಾರಿಗೆ ಮುಖಾಮುಖಿ:2016ರ ಜನವರಿ 29ರಂದು ಇದೇ ಮೈದಾನದಲ್ಲಿ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ತಂಡಗಳು ಮೂರನೇ ಬಾರಿಗೆ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲೂ 27 ರನ್‌ಗಳಿಂದ ಭಾರತ ತಂಡ ಆಸ್ಟ್ರೇಲಿಯಾವನ್ನು ಸೋಲಿಸಿತ್ತು. ಅಲ್ಲದೇ, ಮೊದಲ ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಕೇವಲ 3 ವಿಕೆಟ್ ನಷ್ಟಕ್ಕೆ 184 ರನ್ಗಳ ಗರಿಷ್ಠ ಸ್ಕೋರ್ ಗಳಿಸಿತ್ತು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 8 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಲಷ್ಟೇ ಶಕ್ತವಾಗಿತ್ತು.