ನವದೆಹಲಿ:ವಿಶ್ವಕಪ್‌ನಲ್ಲಿ ರನ್ ಮಳೆಯನ್ನೇ ಹರಿಸಿ ದಾಖಲೆಗಳನ್ನು ಬರೆದಿರುವ ಬ್ಯಾಟಿಂಗ್ ಕಿಂಗ್ ವಿರಾಟ್ ಕೊಹ್ಲಿ ಮುಂಬರುವ ದಕ್ಷಿಣ ಆಫ್ರಿಕಾ ಎದುರಿನ ಟಿ20, ಏಕದಿನ ಸರಣಿಯಿಂದಲೂ ದೂರ ಉಳಿಯಲಿದ್ದಾರೆ ಎಂದು ತಿಳಿದುಬಂದಿದೆ. ಟೆಸ್ಟ್ ಸರಣಿಗೆ ಅವರು ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಪ್ರಸ್ತುತ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಬೂಮ್ರಾ, ಜಡೇಜಾ ಸೇರಿದಂತೆ ಪ್ರಮುಖ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಇದಾದ ಬಳಿಕ ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಡಿಸೆಂಬರ್ 10 ರಿಂದ ಸರಣಿ ಆರಂಭವಾಗಲಿದೆ. ಈ ಪ್ರವಾಸದಲ್ಲಿ ಭಾರತ ಟಿ20, ಏಕದಿನ ಮತ್ತು ಟೆಸ್ಟ್ ಸರಣಿಯನ್ನು ಆಡಲಿದೆ.
ಬಿಸಿಸಿಐಗೆ ಮಾಹಿತಿ ರವಾನೆ:ಈ ಸರಣಿಯಲ್ಲಿ ಸದ್ಯ ವಿಶ್ರಾಂತಿ ಪಡೆಯುತ್ತಿರುವ ಎಲ್ಲ ಆಟಗಾರರು ಮರಳಲಿದ್ದಾರೆ. ಆದರೆ, ಪ್ರಮುಖ ವಿದ್ಯಮಾನವೊಂದರಲ್ಲಿ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಅವರು ಟಿ-20 ಮತ್ತು ಏಕದಿನ ಸರಣಿಯಲ್ಲಿ ಆಡಲು ಹಿಂದೇಟು ಹಾಕಿದ್ದಾರೆ. ಈ ಬಗ್ಗೆ ಬಿಸಿಸಿಐಗೆ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ಒಟ್ಟು 8 ಪಂದ್ಯಗಳನ್ನು ಆಡಬೇಕಾಗಿದೆ. ಇದರಲ್ಲಿ 3 ಟಿ 20 ಮತ್ತು 3 ಏಕದಿನ ಪಂದ್ಯಗಳ ಜೊತೆಗೆ 2 ಟೆಸ್ಟ್ ಪಂದ್ಯಗಳು ನಡೆಯಲಿವೆ. ವೈಟ್ ಬಾಲ್ ಸರಣಿಯಿಂದ ಅವರು ವಿರಾಮ ತೆಗೆದುಕೊಳ್ಳಲು ಬಯಸಿದ್ದಾರೆ. ಆದರೆ, ಅವರು ಎರಡು ಟೆಸ್ಟ್ ಪಂದ್ಯಗಳಲ್ಲಿ ಆಡಲಿದ್ದಾರೆ ಎಂದು ಹೇಳಲಾಗಿದೆ.
ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡವನ್ನು ಇನ್ನೂ ಆಯ್ಕೆ ಮಾಡಿಲ್ಲ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಶೀಘ್ರದಲ್ಲೇ ಈ ಕುರಿತು ಸಭೆ ನಡೆಸಲಿದೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ 2 ಟೆಸ್ಟ್ ಸರಣಿ ಆಡಲಿದ್ದು, ಮೊದಲ ಟೆಸ್ಟ್ ಡಿಸೆಂಬರ್ 26 ರಿಂದ ಸೆಂಚುರಿಯನ್ನಲ್ಲಿ ನಡೆಯಲಿದೆ. ಎರಡನೇ ಟೆಸ್ಟ್ ಜನವರಿ 3, 2024 ರಿಂದ ಕೇಪ್ಟೌನ್ನಲ್ಲಿ ಆರಂಭವಾಗಲಿದೆ.
ವಿಶ್ವಕಪ್‌ನ ಧೀರ ವಿರಾಟ್:ಭರ್ಜರಿ ಫಾರ್ಮ್ನಲ್ಲಿರುವ ಚೇಸಿಂಗ್ ಮಾಸ್ಟರ್ ವಿರಾಟ್ ಕೊಹ್ಲಿ, ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ದಾಖಲಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ವಿಶ್ವಕಪ್‌ನ ಅಗ್ರ ಸ್ಕೋರರ್ ಆಗಿದ್ದಲ್ಲದೇ, ಟೂರ್ನಿ ಶ್ರೇಷ್ಠ ಪ್ರಶಸ್ತಿಯನ್ನೂ ಬಾಚಿಕೊಂಡಿದ್ದಾರೆ. ವಿಶ್ವಕಪ್‌ನ 11 ಇನ್ನಿಂಗ್ಸ್‌ಗಳಲ್ಲಿ 765 ರನ್ ಗಳಿಸಿದ್ದಾರೆ. ಇದರಲ್ಲಿ ಮೂರು ಅದ್ಭುತ ಶತಕಗಳು, 5 ಅರ್ಧಶತಕಗಳು ಬಂದಿವೆ. ಒಂದೇ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಹೊಂದಿದ್ದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಅವರು ಮುರಿದಿದ್ದಾರೆ.
ಇದನ್ನೂ ಓದಿ:ಬ್ಯಾಟಿಂಗ್ ಕಿಂಗ್ ವಿರಾಟ್ ಕೊಹ್ಲಿ 'ಟೆಸ್ಟ್ ಶತಕ' ಸರಿಗಟ್ಟಿದ ಕೇನ್ ವಿಲಿಯಮ್ಸನ್!