ಮೊಹಾಲಿ: ಶುಕ್ರವಾರದಿಂದ ಭಾರತ ಮತ್ತು ಶ್ರೀಲಂಕಾ ನಡುವೆ ಮೊದಲ ಟೆಸ್ಟ್ ಆರಂಭವಾಗಲಿದೆ. ಇದು ಕ್ರಿಕೆಟ್ ಸೂಪರ್ ಸ್ಟಾರ್ ವಿರಾಟ್ ಕೊಹ್ಲಿ ಅವರ 100ನೇ ಟೆಸ್ಟ್ ಪಂದ್ಯವಾಗಲಿದ್ದು, ಈ ಪಂದ್ಯವನ್ನು ಪ್ರೇಕ್ಷಕರ ಮುಂದೆ ಆಡಿಸಲು ಬಿಸಿಸಿಐ ಅನುಮತಿ ನೀಡಿದೆ. ಖಾಲಿ ಸ್ಟೇಡಿಯಂನಲ್ಲಿ ಪಂದ್ಯವನ್ನು ಆಯೋಜಿಸುವುದಾಗಿ ಪಂಜಾಬ್ ಕ್ರಿಕೆಟ್ ಮಂಡಳಿ ನಿರ್ಧರಿಸಿತ್ತು.
ಅಭಿಮಾನಿಗಳು ವಿರಾಟ್ ಕೊಹ್ಲಿ ಅವರ ಐತಿಹಾಸಿಕ 100ನೇ ಟೆಸ್ಟ್ ಪಂದ್ಯವನ್ನು ಕಣ್ತುಂಬಿಕೊಳ್ಳಬಹುದು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಂಗಳವಾರ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಈ ಟೆಸ್ಟ್ ಪಂದ್ಯವನ್ನು ಸ್ಟೇಡಿಯಂನ ಶೇ. 50 ರಷ್ಟು ಪ್ರೇಕ್ಷಕರ ಸಮ್ಮುಖದಲ್ಲಿ ಆಯೋಜಿಸಲಾಗುವುದು ಎಂದು ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಖಚಿತಪಡಿಸಿದೆ.
"ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯ ಖಾಲಿ ಮೈದಾನದಲ್ಲಿ ನಡೆಯುವುದಿಲ್ಲ. ಮೈದಾನಕ್ಕೆ ಪ್ರೇಕ್ಷಕರಿಗೆ ಅವಕಾಶ ನೀಡಬೇಕೆ ಎನ್ನುವುದನ್ನು ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಅಲ್ಲಿನ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ನಿರ್ಧರಿಸುತ್ತದೆ. ನಾನು ಪಿಸಿಎ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಅವರು 100ನೇ ಟೆಸ್ಟ್ ಪಂದ್ಯವನ್ನಾಡುವ ವಿರಾಟ್ ಕೊಹ್ಲಿ ಐತಿಹಾಸಿಕ ಕ್ಷಣಕ್ಕೆ ಕ್ರಿಕೆಟ್ ಅಭಿಮಾನಿಗಳು ಸಾಕ್ಷಿಯಾಗಲಿದ್ದಾರೆ ಎಂದು ಖಚಿತಪಡಿಸಿದ್ದಾರೆ" ಎಂದು ಹೇಳಿಕೆಯಲ್ಲಿ ಶಾ ತಿಳಿಸಿದ್ದಾರೆ.
ಇದನ್ನೂ ಓದಿ:ಗಲ್ಲಿ ಕ್ರಿಕೆಟ್ to ರಣಜಿ ಟ್ರೋಫಿ.. ಗುಡಿಸಲಿನಲ್ಲಿ ಬೆಳೆದ ಹುಡುಗನ ಅದ್ಭುತ ಕ್ರಿಕೆಟ್ ಪಯಣ
ವೆಸ್ಟ್ ಇಂಡೀಸ್ ವಿರುದ್ಧದ ಇತ್ತೀಚಿನ ವೈಟ್-ಬಾಲ್ ಸರಣಿಯನ್ನು ಖಾಲಿ ಸ್ಟೇಡಿಯಂನಲ್ಲಿ ಆಡಲಾಗಿತ್ತು. ಆದರೆ ದೇಶಾದ್ಯಂತ ಕೋವಿಡ್ 19 ಪ್ರಕರಣಗಳ ಕುಸಿತವು ಆತಿಥ್ಯ ವಹಿಸುವ ಅಸೋಸಿಯೇಷನ್‌ಗಳಿಗೆ ಪ್ರೇಕ್ಷಕರನ್ನು ಅನುಮತಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಹೇಳಿದರು.