ಲಖನೌ (ಉತ್ತರಪ್ರದೇಶ): ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ವಿಶ್ವಕಪ್ ಕ್ರಿಕೆಟ್‌ನ ಮಹತ್ವದ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಇಂಗ್ಲೆಂಡ್ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿತು. ಟೂರ್ನಿಯ 29ನೇ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ತಂಡ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಒಂದು ವೇಳೆ ಪಂದ್ಯದಲ್ಲಿ ಸೋತರೆ ಇಂಗ್ಲೆಂಡ್ ತಂಡ ವಿಶ್ವಕಪ್ನಿಂದ ಬಹುತೇಕ ಹೊರಬೀಳುವ ಸಾಧ್ಯತೆ ದಟ್ಟವಾಗಿದೆ.
ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಸತತ ಐದನೇ ಗೆಲುವು ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿದೆ. ಇನ್ನೊಂದೆಡೆ, ಸತತ ಸೋಲಿನಿಂದ ಕಂಗೆಟ್ಟಿರುವ ಇಂಗ್ಲೆಂಡ್ ಐದು ಪಂದ್ಯದಲ್ಲಿ ನಾಲ್ಕು ಪಂದ್ಯಗಳಲ್ಲಿ ಸೋತು ಅಂಕಪಟ್ಟಿಯಲ್ಲಿ ಕೊನೆ ಸ್ಥಾನದಲ್ಲಿದೆ.
ರೋಹಿತ್ ನಾಯಕತ್ವದ 100ನೇ ಪಂದ್ಯ:ಇಂಗ್ಲೆಂಡ್ ವಿರುದ್ಧದ ಪಂದ್ಯವನ್ನು ಭಾರತದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಮುನ್ನಡೆಸುತ್ತಿದ್ದಾರೆ. ರೋಹಿತ್ ಶರ್ಮಾ ನಾಯಕನಾಗಿ ಭಾರತವನ್ನು ಮುನ್ನಡೆಸುತ್ತಿರುವ ನೂರನೇ ಪಂದ್ಯ ಇದಾಗಿದ್ದು, ಈ ಮೂಲಕ ಮತ್ತೊಂದು ಮೈಲಿಗಲ್ಲು ಸಾಧಿಸಲು ಶರ್ಮಾ ಮುಂದಾಗಿದ್ದಾರೆ. 2017 ಡಿಸೆಂಬರ್ 10ರಂದು ರೋಹಿತ್ ಶರ್ಮಾ ಮೊದಲ ಬಾರಿಗೆ ಭಾರತ ತಂಡವನ್ನು ಮುನ್ನಡೆಸಿದ್ದರು. ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸಿದ್ದರು. ಬಳಿಕ 2021ರ ಅಂತ್ಯದಲ್ಲಿ ವಿರಾಟ್ ಕೊಹ್ಲಿ ತಂಡದ ನಾಯಕತ್ವ ವಹಿಸಿಕೊಂಡರು.
ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡವು ಇದುವರೆಗೆ ಒಟ್ಟು 99 ಪಂದ್ಯಗಳನ್ನು ಆಡಿದೆ. 99 ಪಂದ್ಯಗಳಲ್ಲಿ ಒಟ್ಟು 73 ಪಂದ್ಯಗಳಲ್ಲಿ ಜಯಗಳಿಸಿದ್ದು, 23 ಪಂದ್ಯಗಳನ್ನು ಸೋತಿದ್ದಾರೆ. ಮೂರು ಪಂದ್ಯಗಳಲ್ಲಿ ಯಾವುದೇ ಫಲಿತಾಂಶ ಇಲ್ಲ. ರೋಹಿತ್ ಮುನ್ನಡೆಸಿದ ಪಂದ್ಯಗಳಲ್ಲಿ ಒಟ್ಟು ಶೇ. 73.37ರಷ್ಟು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದಾರೆ.