ನವದೆಹಲಿ:ಭಾರತೀಯ ಕುಸ್ತಿ ಒಕ್ಕೂಟದ ಅಧಿಕಾರಿಗಳ ವಿರುದ್ಧ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಮೇಲುಸ್ತುವಾರಿ ಸಮಿತಿಯನ್ನು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ಸೋಮವಾರ ಪ್ರಕಟಿಸಿದೆ. ಈಗ ಪ್ರತಿಭಟನಾ ನಿರತ ಕುಸ್ತಿಪಟುಗಳು ಸಮಿತಿಯ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದಾರೆ. ಹಲವಾರು ಪ್ರತಿಭಟನಾ ನಿರತ ಕುಸ್ತಿಪಟುಗಳು ಮೇಲುಸ್ತುವಾರಿ ಸಮಿತಿಯನ್ನು ರಚಿಸುವ ಮೊದಲು ಸಮಾಲೋಚಿಸದಿರುವ ಬಗ್ಗೆ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ. ರಚನೆಯ ಮೊದಲು ನಮ್ಮನ್ನು ಸಂಪರ್ಕಿಸಲಾಗುವುದು ಎಂದು ಭರವಸೆ ನೀಡಲಾಗಿತ್ತು ಎಂದು ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ, ವಿನೇಶ್ ಫೋಗಟ್ ಮತ್ತು ಸರಿತಾ ಮೋರ್ ಅಸಮಾಧಾನ ಹೊರಹಾಕಿದ್ದಾರೆ.
ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಕುರಿತು ತನಿಖೆ ನಡೆಸಲು ಉಸ್ತುವಾರಿ ಸಮಿತಿಯನ್ನು ರಚಿಸಲಾಗಿದೆ ಎಂದು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ಸೋಮವಾರ ಪ್ರಕಟಿಸಿದೆ. ಬಾಕ್ಸಿಂಗ್ ಪಟು ಹಾಗೂ ಒಲಿಂಪಿಕ್ ಪದಕ ವಿಜೇತೆ ಮೇರಿ ಕೋಮ್ ಅವರು ಐವರು ಸದಸ್ಯರ ಉಸ್ತುವಾರಿ ಸಮಿತಿಯ ಮುಖ್ಯಸ್ಥರಾಗಿರುತ್ತಾರೆ. ಮೇಲುಸ್ತುವಾರಿ ಸಮಿತಿ ರಚನೆಗೂ ಮುನ್ನವೇ ನಮ್ಮೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಭರವಸೆ ನೀಡಲಾಗಿತ್ತು. ಈ ಸಮಿತಿ ರಚನೆಗೂ ಮುನ್ನ ನಮ್ಮನ್ನು ಸಂಪರ್ಕಿಸದಿರುವುದು ಬೇಸರದ ಸಂಗತಿ. @narendramodi @AmitShah @ianuragthakur ಎಂದು ವಿನೇಶ್ ಫೋಗಟ್ ಟ್ವೀಟ್ ಮಾಡಿದ್ದಾರೆ. ಇತರ ಸ್ಟಾರ್ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ತಮ್ಮ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‌ಗಳಲ್ಲಿ ಅದೇ ರೀತಿ ಟ್ವೀಟ್ ಮಾಡಿದ್ದಾರೆ.
ಸೋಮವಾರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಸಮಿತಿ ರಚನೆಯ ಬಗ್ಗೆ ಮಾಡಿದರು. ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮತ್ತು ಅದರ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರ ತರಬೇತುದಾರರ ವಿರುದ್ಧದ ಆರೋಪಗಳ ತನಿಖೆಗಾಗಿ ರಚಿಸಲಾದ ಮೇಲ್ವಿಚಾರಣಾ ಸಮಿತಿಗೆ ಬಾಕ್ಸರ್ ಮೇರಿ ಕೋಮ್ ನೇತೃತ್ವ ವಹಿಸಲಿದ್ದಾರೆ ಎಂದು ಠಾಕೂರ್ ಸೋಮವಾರ ತಿಳಿಸಿದ್ದರು.