ಬಾಗಲಕೋಟೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆದು ಅಡುಗೆ ಅನಿಲ, ಡೀಸೆಲ್ ಹಾಗೂ ಪೆಟ್ರೋಲ್ ಬೆಲೆಗಳನ್ನು ಕೂಡಲೇ ಕಡಿಮೆಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇಂದು ನವನಗರದ ಎಪಿಎಂಸಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಜಿಲ್ಲಾ ಕಾಂಗ್ರೆಸ್ ಹಾಗೂ ಬಾಗಲಕೋಟೆ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ದಿನೇ ದಿನೇ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಯನ್ನು ಏರಿಕೆ ಮಾಡುತ್ತಿರುವುದನ್ನು ಖಂಡಿಸಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ 58 ಡಾಲರ್ಗೆ ಒಂದು ಬ್ಯಾರಲ್‍ಗೆ ಇದ್ದರೂ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕ್ರಮವಾಗಿ 93 ಹಾಗೂ 84 ರೂ.ಗೆ ಹೆಚ್ಚಳವಾಗಿದೆ. ಗ್ಯಾಸ್ ಸಿಲೆಂಡರ್ 400 ರಿಂದ 850 ಆಗಿದೆ. ದಿನಬಳಕೆಯ ಎಲ್ಲ ಧಾನ್ಯಗಳು, ತರಕಾರಿ ಬೆಲೆಗಳು ಗಗನಕ್ಕೇರಿ ಜನಸಾಮಾನ್ಯರ ಮೇಲೆ ಬರೆ ಎಳೆದಂತಾಗಿದೆ ಎಂದರು.