ಬಾಗಲಕೋಟೆ:ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‍ಎಕ್ಯೂ ಗುಣಮಟ್ಟದ ಹೆಸರು ಕಾಳು ಉತ್ಪನ್ನಕ್ಕೆ ಪ್ರತಿ ಕ್ವಿಂಟಲ್‍ಗೆ 7,196 ರೂ.ಗಳಂತೆ ಖರೀದಿಸಲಾಗುತ್ತಿದ್ದು, ಸೆ.26 ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜರುಗಿದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಹೆಸರುಕಾಳು ಉತ್ಪನ್ನವನ್ನು ಪ್ರತಿ ಎಕರೆಗೆ 4 ಕ್ವಿಂಟಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ 4 ಕ್ವಿಂಟಲ್ ಖರೀದಿ ಪ್ರಮಾಣ ನಿಗದಿಪಡಿಸಲಾಗಿದೆ. ಹೆಸರು ಕಾಳು ಖರೀದಿಸಲು ನಾಫೆಡ್ ಸಂಸ್ಥೆಯನ್ನು ಕೇಂದ್ರದ ಖರೀದಿ ಎಜೆನ್ಸಿಯಾಗಿ ಹಾಗೂ ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ಬೆಂಗಳೂರು ಸಂಸ್ಥೆಯನ್ನು ರಾಜ್ಯ ಮಟ್ಟದ ಖರೀದಿ ಏಜೆನ್ಸಿಯಾಗಿ ನೇಮಿಸಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಬಾಗಲಕೋಟೆ ತಾಲೂಕಿನ ಪಿ.ಕೆ.ಪಿ.ಎಸ್ ದೇವನಾಳ, ಹುನಗುಂದ ತಾಲೂಕಿನ ಎಫ್.ಪಿ.ಒ ಸುಳಿಭಾವಿ, ಟಿ.ಎ.ಪಿ.ಸಿ.ಎಂ.ಎನ್ ಹುನಗುಂದ, ಬಾದಾಮಿ ಪಿ.ಕೆ.ಪಿ.ಎಸ್, ಬೀಳಗಿ, ಮುಧೋಳ ಹಾಗೂ ಜಮಖಂಡಿ ಟಿ.ಎ.ಪಿ.ಸಿ.ಎಂ.ಎಸ್ ಸೇರಿ ಒಟ್ಟು 6 ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಖರೀದಿ ಕೇಂದ್ರಗಳಲ್ಲಿ ಬೇಕಾದ ಮೂಲ ಸೌಲಭ್ಯಗಳ ವ್ಯವಸ್ಥೆ ಮಾಡಿಕೊಂಡು ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿಗಳು ಸೂಚಿಸಿದರು.