ಬಾಗಲಕೋಟೆ: ರಾಜ್ಯ ಸರ್ಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸರ್ಕಾರದ ಸಾಧನೆಯ ಕಿರು ಹೊತ್ತಿಗೆಯನ್ನು ಜಿಲ್ಲಾಡಳಿತ ಭವನದಲ್ಲಿರುವ ಆಡಿಟೋರಿಯಂ ಹಾಲ್‍ನಲ್ಲಿ ಬಿಡುಗಡೆ ಮಾಡಿದರು.
ಬಾಗಲಕೋಟೆ ಆಡಿಟೋರಿಯಂ ಹಾಲ್‍ನಲ್ಲಿ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಜರುಗಿದ ಸರ್ಕಾರದ ಒಂದು ವರ್ಷದ ಪ್ರಧಾನ ಸಮಾರಂಭದ ನೇರ ಪ್ರಸಾರವನ್ನು ವೀಕ್ಷಿಸಿ ಸಾಧನೆಯ ಕಿರು ಹೊತ್ತಿಗೆ, ಜನಪದ ಮತ್ತು ಮಾರ್ಚ್ ಆಫ್ ಕರ್ನಾಟಕ ಮಾಸ ಪತ್ರಿಕೆಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಾ ಅತ್ಯುತ್ತಮ ಆಡಳಿದ ನೀಡಿದೆ ಎಂದರು.
ಬರ ಮತ್ತು ಪ್ರವಾಹದಿಂದಾಗಿ ಸುಮಾರು 35 ಸಾವಿರ ಕೋಟಿ ರೂ.ಗಳಷ್ಟು ಹಾನಿ ಸಂಭವಿಸಿತ್ತು. ಸಂತ್ರಸ್ತರಿಗೆ ತಕ್ಷಣದ ಪರಿಹಾರ ಮತ್ತು ಪುನರ್ವಸತಿ ಒದಗಿಸಿ, ಹಾನಿಗೀಡಾದ ರಸ್ತೆ, ಸೇತುವೆ, ಶಾಲಾ-ಕಾಲೇಜುಗಳ ದುರಸ್ತಿ ಮಾಡಿಸಿ, ಮನೆ ಕಟ್ಟಿಕೊಳ್ಳಲು 5 ಲಕ್ಷ ರೂ.ಗಳನ್ನು ನೀಡುವ ಮೂಲಕ ಉಳಿದ ರಾಜ್ಯಕ್ಕೆ ಮಾದರಿಯಾಗಿದ್ದಾರೆ ಎಂದು ತಿಳಿಸಿದರು.
ಈ ಮಧ್ಯೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ವೈದ್ಯರು, ಶುಶ್ರೂಷಕರು, ಇತರ ವೈದ್ಯಕೀಯ ಸಿಬ್ಬಂದಿ, ಜಿಲ್ಲಾಡಳಿತ, ಪೊಲೀಸ್, ಆಶಾ ಕಾರ್ಯಕರ್ತೆ ಹಾಗೂ ಇತರೆ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಜೊತೆ ಚರ್ಚಿಸಿ ನಿಯಂತ್ರಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕರಾದ ವೀರಣ್ಣ ಚರಂತಿಮಠ, ಸಿದ್ದು ಸವತಿ, ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.