ಬಾಗಲಕೋಟೆ:ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆಗಳ ಕುರಿತು ನಿಷ್ಪಕ್ಷಪಾತವಾಗಿ ಸಮೀಕ್ಷೆ ನಡೆಸಿ, ಅರ್ಹ ಫಲಾನುಭವಿಗಳಿಗೆ ಪರಿಹಾರ ಒದಗಿಸಬೇಕು. ಲೋಪ ಎಸೆಗಿದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಮಖಂಡಿ ತಹಶೀಲ್ದಾರ್ ಕಚೇರಿಯಲ್ಲಿಂದು ನಡೆದ ಅತಿವೃಷ್ಟಿ, ಪ್ರವಾಹದಿಂದಾದ ಹಾನಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಪ್ರದೇಶದಲ್ಲಿ ನೂರಕ್ಕೆ ಶೇ.90 ರಷ್ಟು ಕಲ್ಲು ಮತ್ತು ಮಣ್ಣಿನಿಂದ ಕಟ್ಟಿದ ಮನೆಗಳಿವೆ. ಮಳೆ ನಿಂತ ಮೇಲೆಯೂ ಸಹ ಮನೆಗಳು ಬೀಳುವ ಸಾಧ್ಯತೆ ಇರುವುದರಿಂದ ಸಮೀಕ್ಷೆಯನ್ನು ನಿಖರವಾಗಿ ಮಾಡಬೇಕು. ಯಾವುದೇ ರೀತಿಯಲ್ಲಿ ಸಮೀಕ್ಷೆಯಿಂದ ಬಿಟ್ಟು ಹೋಗದಂತೆ ಕ್ರಮವಹಿಸಬೇಕು ಎಂದರು.