ಬಾಗಲಕೋಟೆ: ಸರ್ಕಾರದ ಅನುದಾನದ ಜೊತೆ ಸ್ಥಳೀಯ ಸಂಪನ್ಮೂಲಗಳನ್ನು ಸಹ ಕ್ರೋಢೀಕರಿಸಿಕೊಂಡು ಗ್ರಾಮಗಳನ್ನು ಅಭಿವೃದ್ಧಿ ಪಡಿಸಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಂಗೂಬಾಯಿ ಮಾನಕರ ಕರೆ ನೀಡಿದರು.
ಜಿಲ್ಲಾಡಳಿತದ ಸಭಾಭವನದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಅನುಷ್ಠಾನ ಕುರಿತಾಗಿ ಎಲ್ಲಾ ಗ್ರಾಮ ಪಂಚಾಯತ್ ಅಧ್ಯಕ್ಷರುಗಳಿಗೆ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಗ್ರಾಮಗಳ ಅಭಿವೃದ್ಧಿಗಾಗಿ ನರೇಗಾ ಯೋಜನೆಯಡಿ 178 ಕೋಟಿ ರೂ. ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ರಾಜ್ಯದಲ್ಲಿ ನಮ್ಮ ಜಿಲ್ಲೆ 7ನೇ ಸ್ಥಾನದಲ್ಲಿದೆ ಎಂದರು.
ತೋಟಗಾರಿಕೆ ಇಲಾಖೆ ವತಿಯಿಂದ ನೆರೇಗಾ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮಕ್ಕೆ ಇಲ್ಲಿಯವರೆಗೆ 270.000 ಲಕ್ಷ ರೂ. ಅನುದಾನ ಬಳಕೆಯಾಗಿದೆ. ಹಾಗೂ ಐಇಸಿ ಅಡಿ ಜಲಾಮೃತ, ಸ್ವಚ್ಛ ಮೇವ ಜಯತೆ ಕಾರ್ಯಕ್ರಮದಡಿ ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ಮಾಡಲಾಗುತ್ತಿದ್ದು, 65,000 ಗಿಡಗಳನ್ನು ನೆಡಲಾಗಿದೆ ಎಂದು ತಿಳಿಸಿದರು.
198 ಗ್ರಾಮ ಪಂಚಾಯತ್ಗಳಲ್ಲಿ 26 ಗ್ರಾಮ ಪಂಚಾಯತಿಗಳಿಗೆ ಸ್ಥಳ ದೊರೆತಿದ್ದು, ಒಂದೊಂದು ಗ್ರಾಮದ ಅಭಿವೃದ್ಧಿಗೆ 20 ಲಕ್ಷ ರೂ. ಅನುದಾನ ಹಂಚಿಕೆಯಾಗಿದೆ. ಕಸದಿಂದ ರಸ ಕಾರ್ಯಕ್ರಮದ ಮೂಲಕ ಪ್ರತಿಯೊಂದು ಗ್ರಾಮಗಳಲ್ಲಿ ಕಸದ ಗುಂಡಿಗಳನ್ನು ತೆರೆಯಲಾಗಿದೆ. ಕಸ ಸಾಗಿಸಲು ವಾಹನ ನಿಯೋಜಿಸಲಾಗಿದ್ದು, ಘನತ್ಯಾಜ್ಯ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.