ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದಿನಿಂದ ಎರಡು ದಿನಗಳ ಕಾಲ ಬಾದಾಮಿ ಕ್ಷೇತ್ರದಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ.
ಈ ಮಧ್ಯೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಬಾದಾಮಿ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದರು. ಇತ್ತೀಚೆಗೆ ಇಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದು, ಅವರ ಕುಟುಂಬಸ್ಥರನ್ನು ಭೇಟಿ ಮಾಡಿ, ಸರ್ಕಾರದಿಂದ ಪರಿಹಾರ ವಿತರಿಸುವ ಮೂಲಕ ಸಿದ್ದರಾಮಯ್ಯನವರಿಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೋವಿಂದ ಕಾರಜೋಳ ಚೆಕ್ ಮೇಟ್ ನೀಡಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.
ಲಾಕ್ ಡೌನ್ನಿಂದ ಕಳೆದ ನಾಲ್ಕು ತಿಂಗಳಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಕ್ಷೇತ್ರವಾಗಿರುವ ಬಾದಾಮಿಗೆ ಪ್ರವಾಸ ಹಮ್ಮಿಕೊಂಡಿದ್ದಿಲ್ಲ. ಈಗ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜೊತೆಗೆ ಇತ್ತೀಚಿಗೆ ಕ್ಷೇತ್ರದಲ್ಲಿ ಸಿಡಿಲು ಬಡಿದು ಮೃತಪಟ್ಟಿರುವ ಹೊಸೂರು ಗ್ರಾಮದ ಮಹಿಳೆಯ ಕುಟುಂಬದವರಿಗೆ ಹಾಗೂ ನಂದಿಕೇಶ್ವರ ಗ್ರಾಮದಲ್ಲಿ ಸಿಡಿಲು ಬಡಿದು ಸಾವನ್ನಪ್ಪಿರುವ ವೃದ್ಧನ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ.
ಈ ಬಗ್ಗೆ ಮಾಹಿತಿಯನ್ನು ಮೊದಲೇ ತಿಳಿದಿದ್ದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ದಿಡೀರ್ನೆ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಪ್ರವಾಸ ಹಮ್ಮಿಕೊಂಡಿದ್ದು, ಮೃತಪಟ್ಟವರ ಕುಟುಂಬಸ್ಥರ ಮನೆಗೆ ಭೇಟಿ ನೀಡಿ ಸರ್ಕಾರದಿಂದ ಐದು ಲಕ್ಷ ರೂಪಾಯಿ ಪರಿಹಾರ ವಿತರಿಸಿದ್ದಾರೆ. ಸಿದ್ದರಾಮಯ್ಯನವರು ಸರ್ಕಾರದ ವಿರುದ್ಧ ಆರೋಪ ಮಾಡುವ ಮುಂಚೆಯೇ ಪರಿಹಾರ ವಿತರಿಸಿದ್ದಾರೆ.
ಲಾಕ್ಡೌನ್ ಸಮಯದಲ್ಲಿ ಕ್ಷೇತ್ರಕ್ಕೆ ಸಿದ್ದರಾಮಯ್ಯನವರು ಬಂದಿಲ್ಲ ಎಂಬ ಆರೋಪವನ್ನು ಬಿಜೆಪಿಗರು ಮಾಡಿದ್ದರು. ಅದು ಅಲ್ಲದೆ ಕ್ಷೇತ್ರದ ಜನತೆ ಸಹ ಸಿದ್ದರಾಮಯ್ಯನವರ ಆಗಮನಕ್ಕೆ ಚಾತಕ ಪಕ್ಷಿಯಂತೆ ಕಾಯುತ್ತಿದ್ದರು. ಈಗ ಪ್ರವಾಸ ಹಮ್ಮಿಕೊಂಡಿದ್ದು, ಕೊರೊನಾ ವಾರಿಯರ್ ಅಂಗನವಾಡಿ ಕಾರ್ಯಕರ್ತೆ ಮನೆಗೆ ಭೇಟಿ ನೀಡಲಿದ್ದಾರೆ.