ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಲ್ಲಿ ನಿಂತರೂ ಸೋಲುತ್ತಾರೆ. ಬಾದಾಮಿ ಮತ ಕ್ಷೇತ್ರದಲ್ಲಿ ಸೋಲು ಖಚಿತ ಎನ್ನುವುದನ್ನು ಅರಿತು ಬಾದಾಮಿ ಬಿಟ್ಟು ಹೋಗಿದ್ದಾರೆ ಎಂದು ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ತಿಳಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಕೇದಾರನಾಥ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿ, ಬಾದಾಮಿಯ ಆಂತರಿಕ ಸರ್ವೇಯಲ್ಲಿ ಸೋಲು ಎಂಬ ಮಾಹಿತಿ ಇದೆ. ಈ ಹಿನ್ನೆಲೆ ಬಾದಾಮಿ ಬಿಟ್ಟು ಹೋಗಿದ್ದಾರೆ. ಸಿದ್ದರಾಮಯ್ಯನವರ ಬಗ್ಗೆ ವೈಯಕ್ತಿಕವಾಗಿ ಗೌರವ ಇದೆ. ಆದರೆ ಕಾಂಗ್ರೆಸ್ ಪಕ್ಷದವರೇ ಸೋಲುವಂತೆ ಮಾಡುತ್ತಾರೆ ಎಂದರು.
ಇದೇ ಸಮಯದಲ್ಲಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ನಮ್ಮ ಸರ್ಕಾರ ಎಲ್ಲ ಸಮಾಜದವರಿಗೆ ಅನುಕೂಲ ಮಾಡಿದೆ. ಎಲ್ಲರ ಅಭಿವೃದ್ಧಿಗಾಗಿ ಬಿಜೆಪಿ ಪಕ್ಷ ಹೆಚ್ಚು ಒತ್ತು ನೀಡುತ್ತಿದೆ. ವಿರೋಧ ಮಾಡುವ ಕಾಂಗ್ರೆಸ್ ಪಕ್ಷದವರು, ಮೀಸಲಾತಿ ವಿಚಾರವಾಗಿ ಸಮಗ್ರ ಮಾಹಿತಿ ತಿಳಿದುಕೊಂಡು ಮಾತನಾಡಬೇಕು ಎಂದು ನಿರಾಣಿ ಹೇಳಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ-ನಿರಾಣಿ: ಮುಂದೆ ನಮ್ಮ ಸರ್ಕಾರ ಬಂದಾಗ ಈಗ ಜಾರಿಗೆ ತಂದಿರುವ ಎಲ್ಲಾ ಮೀಸಲಾತಿ ರದ್ದು ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅಧಿಕಾರಕ್ಕೆ ಬರಲ್ಲ. ಇನ್ನೂ ಬದಲಾವಣೆ ಏನು ಮಾಡುತ್ತಾರೆ. ಮತ್ತೆ ಬಿಜೆಪಿ ಸರ್ಕಾರ ಬರುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಆದರೂ ತಪ್ಪೇನು ಇದೆ. ಬೊಮ್ಮಾಯಿ ಅವರು ಒಳ್ಳೆಯ ಕೆಲಸ ಕಾರ್ಯ ಮಾಡುತ್ತಿದ್ದಾರೆ. ಅವರೇ ಮುಖ್ಯಮಂತ್ರಿ ಆದಲ್ಲಿ ಏನೂ ತಪ್ಪಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಲಕುರ್ಕಿ 2000 ಏಕರೆ ಜಮೀನು ಭೂಸ್ವಾಧೀನ: ವರುಣಾ ಕ್ಷೇತ್ರದಲ್ಲಿ ಬಿ ವೈ ವಿಜಯೇಂದ್ರ ಸ್ಪರ್ಧೆ ಬಗ್ಗೆ ಪ್ರತಿಕ್ರಿಯೆ ನೀಡಿದ ನಿರಾಣಿ ಅವರು, ಬಿಜೆಪಿ ಪಕ್ಷದ ಹೈಕಮಾಂಡ್ ಹಾಗೂ ಬಿಜೆಪಿ ಪಕ್ಷದ ಹಿರಿಯರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಆ ಬಗ್ಗೆ ನಾನು ಚಿಕ್ಕವನು ಎಂದರು.