ಬಾಗಲಕೋಟೆ: ಗೋ ಸಂರಕ್ಷಣೆ ಹಾಗೂ ಅಭಿವೃದ್ಧಿ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ಶೀಘ್ರವಾಗಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗುವುದು ಎಂದು ಪಶು ಸಂಗೋಪನೆ ಇಲಾಖೆಯ ಸಚಿವ ಪ್ರಭು ಚವ್ಹಾಣ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಹತ್ಯೆ ನಿಷೇಧ ಮಾಡುವುದು ನೂರಕ್ಕೆ ನೂರರಷ್ಟು ಖಚಿತ. ಇದರಲ್ಲಿ ಹಿಂದಡಿ ಇಡುವ ಮಾತೇ ಇಲ್ಲ. ಅದರ ಸಾಧಕ ಬಾಧಕಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ಸಚಿವ ಸಂಪುಟ ವಿಸ್ತರಣೆಯಿಂದಾಗಿ ನಿಮ್ಮ ಸ್ಥಾನವನ್ನು ಬೇರೆಯವರಿಗೆ ನೀಡುವ ಸಾಧ್ಯತೆ ಇದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಪಕ್ಷದ ಕಾರ್ಯಕರ್ತ, ಹಿರಿಯ ಮುಖಂಡ. ಮುಖ್ಯಮಂತ್ರಿಗಳು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದರು.
ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಸಚಿವ ಸ್ಥಾನ ಸಿಗುತ್ತದೆ ಎಂದು ಕನಸು ಕಂಡಿದ್ದಿಲ್ಲ. ಸಚಿವ ಸ್ಥಾನ ಸಿಕ್ಕಿತು. ಈಗ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ಬೇಡ ಅಂದರೂ ಕಾರ್ಯಕರ್ತನಾಗಿಯೂ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು. ಇದೇ ಸಮಯದಲ್ಲಿ ರಾಜ್ಯದಲ್ಲಿ ಪ್ರವಾಹ ಹಾಗೂ ಮಳೆಯಿಂದ ಪ್ರಾಣ ಹಾನಿಗೆ ಒಳಗಾಗಿರುವ ಜಾನುವಾರುಗಳ ಪರಿಹಾರಕ್ಕೆ ಯೋಜನೆ ಹಾಕಿಕೊಂಡಿದ್ದು, ಅದರ ಮೂಲಕ ಸರ್ಕಾರದಿಂದ ಪರಿಹಾರಧನ ನೀಡಲಾಗುವುದು ಎಂದರು.