ದೊಡ್ಡಬಳ್ಳಾಪುರ :ರಾಜ್ಯದಲ್ಲಿ ಪ್ರತಿವರ್ಷ 250 ಆಸ್ಪತ್ರೆಗಳಂತೆ 5 ವರ್ಷಗಳಲ್ಲಿ ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೇಗೆರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
ತಾಲೂಕಿನ ಮಧುರೆ ಹೋಬಳಿಯ ಕನಸವಾಡಿಯಲ್ಲಿ ಕೃಷಿ ಇಲಾಖೆ ವತಿಯಿಂದ ನಿರ್ಮಿಸಲಾದ ನೂತನ ರೈತ ಸಂಪರ್ಕ ಕೇಂದ್ರ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.
ಕಳೆದ ವರ್ಷದ ಬಜೆಟ್‌ನ ಮೊದಲ ಹಂತದಲ್ಲಿ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ನಿರ್ಣಯ ಕೈಗೊಳ್ಳಲಾಗಿತ್ತು. ಪ್ರತಿವರ್ಷ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳಂತೆ ಐದು ವರ್ಷಗಳಲ್ಲಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೂತನವಾದ ಜಿಲ್ಲಾಸ್ಪತ್ರೆ ಸ್ಥಾಪನೆಗೆ ಕ್ರಮ ವಹಿಸಲಾಗುವುದು. ಕ್ಯಾಬಿನೆಟ್‌ನಲ್ಲಿ ಶೀಘ್ರದಲ್ಲಿ ನಿರ್ಣಯ ಕೈಗೊಂಡು ಹೊಸಕೋಟೆಯಲ್ಲಿ ತಾಯಿ ಮತ್ತು ಮಗುವಿನ ಆಸ್ಪತ್ರೆ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದರು.