ರಾಮನಗರ: ಪ್ರತಿಷ್ಟೆಯ ಕಣವಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಕಾಂಗ್ರೆಸ್ನ ಡಿ.ಕೆ. ಸುರೇಶ್ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿ ಡಿ.ಕೆ.ಸುರೇಶ್ 2,06,870 ಮತಗಳ ಅಂತರದಿಂದ ಗೆಲುವು ದಾಖಲಿಸಿ, ಸತತ ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ನೇರ ಹಣಾಹಣಿಯಲ್ಲಿ ಡಿ.ಕೆ.ಸುರೇಶ್ 8,78,258 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ಅಶ್ವಥ್ ನಾರಾಯಣಗೌಡ 6,71,388 ಮತಗಳನ್ನು ಪಡೆದುಕೊಂಡಿದ್ದಾರೆ. ಅಲ್ಲದೆ, 12,461 ನೋಟಾ ಮತಗಳ ದಾಖಲಾದ ಈ ಕ್ಷೇತ್ರ ನಾಲ್ಕನೇ ಸ್ಥಾನದಲ್ಲಿದೆ.
ಕಣದಲ್ಲಿದ್ದ ಬಿಎಸ್ಪಿ ಅಭ್ಯರ್ಥಿ ಡಾ.ಚೆನ್ನಪ್ಪ ವೈ.ಚಿಕ್ಕಹಾಗಡೆ 19,972 ಮತ ಪಡೆದು ಮೂರನೇ ಸ್ಥಾನದಲ್ಲಿದ್ದು, ಅವರೂ ಸೇರಿದಂತೆ 13 ಮಂದಿ ಠೇವಣಿ ಕಳೆದು ಕೊಂಡಿದ್ದಾರೆ. ಬೆಂಗಳೂರು ದಕ್ಷಿಣ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಅಶ್ವಥ್ ನಾರಾಯಣಗೌಡ ಮುನ್ನಡೆ ಸಾಧಿಸಿದ್ದರೆ, ಉಳಿದ 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಭಾರಿ ಮುನ್ನಡೆ ಸಾಧಿಸಿದ್ದಾರೆ. ರಾಮನಗರ, ಚನ್ನಪಟ್ಟಣ, ಮಾಗಡಿ ಹಾಗೂ ಕುಣಿಗಲ್ ಕ್ಷೇತ್ರಗಳಲ್ಲಿ ಬಿಜೆಪಿ ದ್ವಿತೀಯ ಸ್ಥಾನ ಪಡೆದಿದ್ದರೆ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿಯೂ ಮುನ್ನಡೆ ಸಾಧಿಸುವಲ್ಲಿ ವಿಫಲಗೊಂಡಿದೆ.