ದೊಡ್ಡಬಳ್ಳಾಪುರ: ಬೆಂಬಲ ಬೆಲೆಯಲ್ಲಿ ರಾಗಿ ಮತ್ತು ಜೋಳ ಖರೀದಿ ಕೇಂದ್ರ ತೆರೆಯುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟಿಸಲಾಯಿತು.
ನಗರದ ತಹಶೀಲ್ದಾರ್ ಕಚೇರಿಯ ಎದುರು ಮಾತನಾಡಿದ ರೈತ ಮುಖಂಡರು, ಸ್ವಾಮಿನಾಥನ್ ಆಯೋಗದ ವರದಿಯಂತೆ ರೈತರು ಬೆಳೆದ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಕೊಡುವುದಾಗಿ ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದ ಸರ್ಕಾರಗಳ ಅವೈಜ್ಞಾನಿಕ ನೀತಿ ಮತ್ತು ಕೃಷಿ ಕ್ಷೇತ್ರದ ನಿರ್ಲಕ್ಷ್ಯದಿಂದ ರೈತರ ಸ್ಥಿತಿ ಶೋಚನೀಯವಾಗಿದೆ ಎಂದು ದೂರಿದರು.
ಬೆಂಬಲ ಬೆಲೆಯಲ್ಲಿ ರಾಗಿ- ಜೋಳ ಕೇಂದ್ರ ತೆರೆಯುವಂತೆ ಆಗ್ರಹ ನಂತರ ಮಾತನಾಡಿ, ಕೆಲವು ಕೃಷಿ ಉತ್ಪನ್ನಗಳಿಗೆ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಿದೆ. ಆದರೆ, ಖರೀದಿ ಕೇಂದ್ರಗಳನ್ನು ತೆರೆದಿಲ್ಲ. ಇದರಿಂದ ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿಯಲಿದೆ. ಈಗಾಗಲೇ ಬೆಳೆಗಳ ಕಟಾವ್ ಕಾರ್ಯ ಪ್ರಾರಂಭವಾಗಿದ್ದು, ಸರ್ಕಾರ ಘೋಷಣೆ ಮಾಡಿರುವ ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರ ತೆರೆಯಬೇಕೆನ್ನುವುದು ರೈತರ ಒತ್ತಾಯವಾಗಿದೆ ಎಂದರು.
ಕ್ವಿಂಟಲ್ ರಾಗಿಗೆ 3295 ಮತ್ತು ಜೋಳಕ್ಕೆ 1850ರ ದರದಲ್ಲಿ ಖರೀದಿ ಕೇಂದ್ರ ತೆರೆಯಬೇಕು ಎಂದು ಬೇಡಿಕೆಯಿಟ್ಟ ಅವರು, ಸರ್ಕಾರದಿಂದ ಸಮರ್ಪಕ ಉತ್ತರ ಬರುವವರೆಗೂ ತಹಶೀಲ್ದಾರ್ ಕಚೇರಿ ಮುಂದೆ ನಿರಂತರ ಧರಣಿ ಸತ್ಯಾಗ್ರಹ ನಡೆಸುತ್ತೇವೆ ಎಂದು ಎಚ್ಚರಿಸಿದರು.