ದೇವನಹಳ್ಳಿ: ಕಾಂಗ್ರೆಸ್ ನಾಯಕರು 60 ವರ್ಷಗಳಿಂದ ಓಲೈಕೆ ರಾಜಕಾರಣವನ್ನೇ ಮಾಡಿಕೊಂಡು ಬಂದಿದ್ದಾರೆ. ಕಾಂಗ್ರೆಸ್ ಡರ್ಟಿ ಪಾಲಿಟಿಕ್ಸ್ ಮಾಡಿದೆ ಹೊರತು ಡಿಗ್ನಿಫೈ ಪಾಲಿಟಿಕ್ಸ್ ಮಾಡಿದ ಅಭ್ಯಾಸವಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟೀಕಿಸಿದರು.
ದೇವನಹಳ್ಳಿಯ ಸಮೀಪದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರಗತಿಯ ಪ್ರತಿಮೆ ಹಾಗೂ ಉದ್ಘಾಟನಾ ಕಾರ್ಯಕ್ರಮದ ಸಿದ್ಧತೆಯ ಕುರಿತು ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆ ನಿರ್ಮಾಣದ ಚಿಂತನೆಯನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಚರ್ಚೆಗೆ ತಂದಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಚ್ಛಾಶಕ್ತಿಯಿಂದ ಇಂತಹ ಸುಂದರ ಐತಿಹಾಸಿಕ ಪ್ರತಿಮೆ ನಿರ್ಮಾಣವಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ನಾಡಪ್ರಭು ಕೆಂಪೇಗೌಡರ ಪ್ರತಿಮೆ ಉದ್ಘಾಟನೆ, ವಿಮಾನ ನಿಲ್ದಾಣದ ಟರ್ಮಿನಲ್ - 2, ವಂದೇ ಭಾರತ್ ರೈಲು ಚಾಲನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೆ ಮುನ್ನ ಸ್ಥಳ ಪರಿಶೀಲನೆ ಮಾಡಿ, ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲು ನೀಡಿರುವುದನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇಂತಹ ಕ್ರಮವನ್ನು ತರಲು ಬಿಜೆಪಿಗೆ ಮಾತ್ರ ಸಾಧ್ಯವಾಗುತ್ತದೆ. ಇಂತಹ ಆಲೋಚನೆಗಳು ಕಾಂಗ್ರೆಸ್ ಅಥವಾ ಜೆಡಿಎಸ್ ಬರಲು ಸಾಧ್ಯವಿಲ್ಲ ಎಂದರು.
ಇದೇ ವೇಳೆ ಬಿಜೆಪಿ ಎಂದಿಗೂ ಯಾವುದೇ ಸಮುದಾಯ, ಜಾತಿ, ಧರ್ಮ, ಲಿಂಗದ ಆಧಾರಿತವಾಗಿ ಯೋಜನೆಗಳನ್ನು ರೂಪಿಸಲು ಮುಂದಾಗುವುದಿಲ್ಲ. ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಓಲೈಕೆ ರಾಜಕಾರಣ ಮಾಡಿಕೊಂಡು ಬಂದಿದೆ. ಈಗಲೂ ಅದನ್ನೇ ಮುಂದುವರಿಸುತ್ತಿದೆ. ಶ್ರೇಷ್ಠವಾದ ರಾಜಕಾರಣವನ್ನು ಅವರು ಎಂದೂ ಮಾಡಿಲ್ಲ ಎಂದರು.