ನೆಲಮಂಗಲ: ಬೆಂಗಳೂರು ನೆಲಮಂಗಲ ಹತ್ತಿರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ( ಬಿಐಇಸಿ) ಯಲ್ಲಿ ಫೆ.6ರಂದು ನಡೆಯುವ ಜಿ 20 ಇಂಡಿಯಾ ಎನರ್ಜಿ ವೀಕ್ ಕಾರ್ಯಕ್ರಮದಲ್ಲಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಹೀಗಾಗಿ ಬಿಐಇಸಿ ಕೇಂದ್ರದ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಧಾನಿ ಅವರ ಆಗಮನದ ಹಿನ್ನೆಲೆ ಎಡಿಜಿಪಿ ಅಲೋಕ್ ಕುಮಾರ್ ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಬಿಗಿ ಭದ್ರತೆ ವ್ಯವಸ್ಥೆಯನ್ನು ಪರಿಶೀಲಿಸಿದರು.
ಸೋಮವಾರ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಪ್ರಧಾನಿ ಅವರು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಆಗಮಿಸಲಿದ್ದಾರೆ. ಬಿಐಇಸಿಯಲ್ಲಿ ನಾಲ್ಕು ಹೆಲಿಪ್ಯಾಡ್ ಗಳ ನಿರ್ಮಾಣ ಸಹ ಮಾಡಲಾಗಿದೆ. ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಸೋಮವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ದೇಶ ವಿದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ಗಣ್ಯರು ಆಗಮಿಸಲಿದ್ದು, ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ. ಪ್ರಧಾನಿ ಅವರು ಬರುತ್ತಿರುವ ಹಿನ್ನೆಲೆ ಮಾರ್ಗಗಳಲ್ಲೂ ಬದಲಾವಣೆ ಮಾಡಲಾಗಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ವಾಹನಗಳ ದಟ್ಟಣೆ ಉಂಟಾಗಿದೆ. ಕಿಲೋ ಮೀಟರ್ ಗಟ್ಟಲೆ ವಾಹನಗಳು ನಿಂತಿದ್ದು, ಟ್ರಾಫಿಕ್ ಜಾಮ್ ತೆರವು ಮಾಡಲು ಸಂಚಾರಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಪ್ರವಾಸ: ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನದ ರಾಜ್ಯ ಪ್ರವಾಸ ಕೈಗೊಂಡಿದ್ದು, ಬೆಂಗಳೂರು ಮತ್ತು ತುಮಕೂರಿನಲ್ಲಿನ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಸೋಮವಾರ ರಾತ್ರಿಯೇ ದೆಹಲಿಗೆ ವಾಪಸಾಗಲಿದ್ದಾರೆ. ಚುನಾವಣಾ ಮುನ್ನ ಮೋದಿ ಅವರ ಸರಣಿ ರಾಜ್ಯ ಭೇಟಿ ರಾಜ್ಯ ಬಿಜೆಪಿಗೆ ಬೂಸ್ಟರ್ ಡೋಸ್ ನಂತಾಗಿದೆ.
ಪ್ರಧಾನಿ ಕಾರ್ಯಕ್ರಮದ ವಿವರ: ಸೋಮವಾರ ಬೆಳಗ್ಗೆ 8.20ಕ್ಕೆ ವಾಯುಪಡೆ ವಿಮಾನದಲ್ಲಿ ನವದೆಹಲಿಯಿಂದ ಪ್ರಯಾಣಿಸಲಿರುವ ಪ್ರಧಾನಿ ನರೇಂದ್ರ ಮೋದಿ 10.55ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬೆ. 11.20ಕ್ಕೆ ಗಂಟೆಗೆ ಹೆಲಿಕಾಪ್ಟರ್ ಮೂಲಕ ಹೊರಟು 11.25ಕ್ಕೆ ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದ ಹೆಲಿಪ್ಯಾಡ್ ತಲುಪಲಿದ್ದಾರೆ. 11.30ಕ್ಕೆ ಇಂಧನ ಸಪ್ತಾಹ ಉದ್ಘಾಟಿಸಿ 2.30ರ ವರೆಗೂ ಇಂಡಿಯಾ ಎಜೆರ್ಜಿ ವೀಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.