ದೇವನಹಳ್ಳಿ: ಕೋವಿಡ್-19 ಎರಡನೇ ಅಲೆ ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ರಾಜ್ಯ ಸರ್ಕಾರ ಆದೇಶಿಸಿದ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲಾದ್ಯಂತ ಸಿ.ಆರ್.ಪಿ.ಸಿ. 1973ರ ಕಲಂ 144ರಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ನಿಷೇಧಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸಂತೆ, ಜಾತ್ರೆ, ಮೆರವಣಿಗೆ, ಸಮಾವೇಶ, ಸಮ್ಮೇಳನ, ಕ್ರೀಡಾಕೂಟ, ಸಮಾರಂಭಗಳು ಹಾಗೂ ಇತರೆ ಯಾವುದೇ ಧಾರ್ಮಿಕ ಸಮಾರಂಭಗಳನ್ನು ನಡೆಸುವಂತಿಲ್ಲ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಜಿಲ್ಲೆಯಾದ್ಯಂತ ತುರ್ತು ಸೇವೆಗಳನ್ನು ಹೊರತುಪಡಿಸಿ, 2021ರ ಏಪ್ರಿಲ್ 21ರ ರಾತ್ರಿ 9 ಗಂಟೆಯಿಂದ 2021ರ ಮೇ 4ರ ಬೆಳಗ್ಗೆ 6 ಗಂಟೆಯವರೆಗೆ ರಾಜ್ಯ ಸರ್ಕಾರದ ಆದೇಶದಲ್ಲಿ ಸೂಚಿಸಿರುವ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಿ, ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.