ಬೆಂಗಳೂರು:ರಾಜ್ಯದಲ್ಲಿ ‘ಭ್ರೂಣ ಲಿಂಗ ಪತ್ತೆ ವಿಧಾನಗಳ ನಿಷೇಧ ಕಾಯ್ದೆ’ಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಸಂಬಂಧ ಕಾರ್ಯ ನಿರ್ವಹಿಸುತ್ತಿರುವ ಪ್ರಾಧಿಕಾರಗಳಿಗೆ ಸೂಕ್ತ ತರಬೇತಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಮಾಜಿ ಶಾಸಕ ಡಾ. ಸಾರ್ವಭೌಮ ಬಗಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ, ಸರ್ಕಾರಕ್ಕೆ ಈ ಆದೇಶ ನೀಡಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಲಿಖಿತ ಹೇಳಿಕೆ ಸಲ್ಲಿಸಿ, ಕಾಯ್ದೆ ಅನುಷ್ಠಾನ ಸಂಬಂಧ 2016ರ ನವೆಂಬರ್ 8ರಂದು ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನಗಳನ್ನು ಪಾಲನೆ ಮಾಡಿರುವ ಕುರಿತು ಪೀಠಕ್ಕೆ ಮಾಹಿತಿ ನೀಡಿದರು.
ಅರ್ಜಿದಾರರ ಪರ ವಕೀಲ ಜಿ.ಆರ್. ಮೋಹನ್, ಸುಪ್ರೀಂಕೋರ್ಟ್ ಆದೇಶದಲ್ಲಿ ಕಾಯ್ದೆಯ ಸೆಕ್ಷನ್ 17(1) ಹಾಗೂ 17(2)ರ ಅನುಸಾರ ಪ್ರಾಧಿಕಾರಗಳನ್ನು ರಚಿಸುವಂತೆ ಸರ್ಕಾರಗಳಿಗೆ ನಿರ್ದೇಶಿಸಲಾಗಿದೆ. ಅದರಂತೆ ಪ್ರಾಧಿಕಾರ ರಚಿಸಲಾಗಿದೆಯಾದರೂ, ಅವುಗಳು ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತು ನಿಯಮಿತ ತರಬೇತಿ ನೀಡಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿಸಿದರು.
ಹೇಳಿಕೆ ದಾಖಲಿಸಿಕೊಂಡ ಪೀಠ, ಪ್ರಾಧಿಕಾರಗಳಿಗೆ ತರಬೇತಿ ನೀಡುವ ವಿಚಾರ ಹೊರತುಪಡಿಸಿ ,ಸುಪ್ರೀಕೋರ್ಟ್ ನೀಡಿರುವ ಎಲ್ಲ ನಿರ್ದೇಶನಗಳನ್ನು ಸರ್ಕಾರ ಪಾಲಿಸಿದೆ. ಹೀಗಾಗಿ ಕಾಯ್ದೆ ಅನುಷ್ಠಾನಗೊಳಿಸುವ ಪ್ರಾಧಿಕಾರಗಳಿಗೆ ತರಬೇತಿ ನೀಡುವ ಕುರಿತು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆದೇಶಿಸಿ, ಅರ್ಜಿ ಇತ್ಯರ್ಥಪಡಿಸಿತು. ಹಾಗೆಯೇ ಈ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆಯೂ ಸರ್ಕಾರಕ್ಕೆ ಸೂಚಿಸಿತು.