ಹೊಸಕೋಟೆ:ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕಿ ಮೇಲೆ ಏಕಾಏಕಿ ಬೀದಿನಾಯಿಗಳು ದಾಳಿ ನಡೆಸಿದ ಘಟನೆ ನಡೆದಿದೆ. ನಾಯಿಗಳು ಅಟ್ಯಾಕ್ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಾಲಕಿ ಮೇಲೆ ಬೀದಿನಾಯಿಗಳ ಡೆಡ್ಲಿ ಅಟ್ಯಾಕ್: ಸಿಸಿಟಿವಿಯಲ್ಲಿ ದೃಶ್ಯ ಸೆರೆ - ಬಾಲಕಿ ಮೇಲೆ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕಿ ಮೇಲೆ ಏಕಾಏಕಿ 6 ನಾಯಿಗಳು ದಾಳಿ ನಡೆಸಿದ ಘಟನೆ ಹೊಸಕೋಟೆಯಲ್ಲಿ ನಡೆದಿದೆ. ಬೀದಿನಾಯಿಗಳಿಗೆ ಕಡಿವಾಣ ಹಾಕುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಮಾರ್ಕೆಟ್ ರಸ್ತೆಯಲ್ಲಿ, ಇಂದು ಬೆಳಗ್ಗೆ 16 ವರ್ಷದ ಬಾಲಕಿ ನಡೆದುಕೊಂಡು ಹೋಗುತ್ತಿದ್ದ ವೇಳೆ 6 ಕ್ಕೂ ಹೆಚ್ಚು ನಾಯಿಗಳು ಏಕಾಏಕಿ ದಾಳಿ ಮಾಡಿವೆ. ಸ್ಥಳೀಯರ ನೆರವಿನಿಂದ ಅದೃಷ್ಟವಶಾತ್ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಗಾಯಗೊಂಡ ಬಾಲಕಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾಳೆ. ಬೀದಿ ನಾಯಿಗಳ ದಾಳಿ ಹೆಚ್ಚಾಗುತ್ತಿದೆ ಎಂದು ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾರ್ಕೆಟ್ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾಂಸದಂಗಡಿಗಳು ಇರುವ ಕಾರಣ ನಾಯಿಗಳು ಸಾಕಷ್ಟು ಸಂಖ್ಯೆಯಲ್ಲಿ ಈ ರಸ್ತೆಯಲ್ಲಿ ಬೀಡು ಬಿಟ್ಟಿವೆ.ನಾಯಿಗಳ ಕಡಿವಾಣಕ್ಕೆ ಸಾಕಷ್ಟು ಬಾರಿ ನಗರಸಭೆಗೆ ಸ್ಥಳೀಯರು ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದರು.