ನೆಲಮಂಗಲ(ಬೆಂ.ಗ್ರಾ): ನಗರದಲ್ಲಿ ದಿನೇ ದಿನೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಪ್ರತಿದಿನ ಸರಾಸರಿ 700ರಿಂದ 900 ಪ್ರಕರಣಗಳು ಪತ್ತೆಯಾಗುತ್ತಿವೆ. ಈ ತಿಂಗಳ ಅಂತ್ಯಕ್ಕೆ ಬೆಂಗಳೂರು ನಗರದಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಪ್ರಕರಣಗಳನ್ನು ನಿರ್ವಹಿಸಲು ಈಗಾಗಲೇ ಸರ್ಕಾರ ಬೇಕಾದ ಅಗತ್ಯ ಸಿದ್ಧತೆಯಲ್ಲಿ ತೊಡಗಿದೆ. ಇಲ್ಲಿನ ತುಮಕೂರು ರಸ್ತೆಯ ಮಾದವಾರ ಬಳಿಯ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ (ಬಿಐಇಸಿ)ದಲ್ಲಿ 7 ಸಾವಿರ ಬೆಡ್ಗಳ ಆಸ್ಪತ್ರೆ ನಿರ್ಮಾಣ ಕಾರ್ಯ ಶರವೇಗದಲ್ಲಿ ನಡೆಯುತ್ತಿದೆ.
ರೋಗ ಲಕ್ಷಣ ಇಲ್ಲದ ಸೋಂಕಿತರಿಗೆ ಚಿಕಿತ್ಸೆ ನೀಡಲು ಈ ಆಸ್ಪತ್ರೆ ಮೀಸಲಿಡಲಾಗುತ್ತಿದೆ. ಕರ್ನಾಟಕದಲ್ಲೇ ಅತಿ ದೊಡ್ಡ ಕೋವಿಡ್ ಆರೋಗ್ಯ ಕೇಂದ್ರ ಇದಾಗಿದ್ದು, ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗೆ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಲಾಗುತ್ತಿದೆ.