ದೇವನಹಳ್ಳಿ: ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲಿ ಕ್ಷಯ ರೋಗದ ಲಕ್ಷಣಗಳು ಕಂಡು ಬರುತ್ತಿವೆ. ರಾಜ್ಯಾದ್ಯಂತ ಇಂತಹ 23 ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ದೇವನಹಳ್ಳಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನಾ ಸಭೆ ನೇತೃತ್ವವಹಿಸಿ ಅವರು ಮಾತನಾಡಿದರು.
ಕೋವಿಡ್ ಸೋಂಕು ದೃಢಪಟ್ಟ ವ್ಯಕ್ತಿಗಳ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸುವುದರಿಂದ ಸೋಂಕು ಮತ್ತಷ್ಟು ಉಲ್ಬಣಗೊಳ್ಳದಂತೆ ತಡೆಯಬಹುದು. ರಾಜ್ಯದಲ್ಲಿ ಕೋವಿಡ್ನಿಂದ ಗುಣಮುಖರಾದವರ ಪೈಕಿ 23 ಮಂದಿಯಲ್ಲಿ ಕ್ಷಯ ರೋಗ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಕೋವಿಡ್ನಿಂದ ಗುಣಮುಖರಾಗಿರುವ 60,121 ಮಂದಿಗೂ ಕ್ಷಯ ರೋಗ ಪರೀಕ್ಷೆ ಮಾಡಿಸುವುದರಿಂದ ರೋಗ ನಿಯಂತ್ರಿಸಬಹುದು ಎಂದು ಸಚಿವರು ಹೇಳಿದರು.
ಜಿಲ್ಲೆಯಲ್ಲಿ ನಿಗದಿಪಡಿಸಿರುವ ಗುರಿಗಳನ್ವಯ ಕೋವಿಡ್ ಪರೀಕ್ಷೆಗಳನ್ನು ನಡೆಸಿ ವಿಳಂಬ ಮಾಡದೆ ವರದಿಗಳನ್ನು ನೀಡಿ. ಕೋವಿಡ್ ಸೋಂಕು ದೃಢಪಟ್ಟವರನ್ನು ಆಸ್ಪತ್ರೆಗೆ ದಾಖಲಿಸುವ ಬದಲು ಹೋಮ್ ಐಸೋಲೇಶನ್ ಮಾಡಲು ಗ್ರಾಮಾಂತರ ಪ್ರದೇಶದಲ್ಲಿ ಸೌಲಭ್ಯಗಳ ಕೊರತೆ ಇರುವುದರಿಂದ ವೈದ್ಯರ ಸಲಹೆ ಪಡೆದು ಕೋವಿಡ್ ಆರೈಕೆ ಕೇಂದ್ರಗಳಲ್ಲಿ ದಾಖಲಿಸಬೇಕು. ಹೆಚ್ಚು ಪ್ರಕರಣಗಳು ದಾಖಲಾದ್ದಲ್ಲಿ ಮೈಕ್ರೋ ಕಂಟೇನ್ಮೆಂಟ್ ವಲಯ ಮಾಡಬೇಕು ಎಂದು ಸಚಿವ ಸುಧಾಕರ್ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ ಶೀಘ್ರವೇ ಮಕ್ಕಳಿಗಾಗಿ "ಆರೋಗ್ಯ ನಂದನ" ಎಂಬ ವಿಶೇಷ ಆರೋಗ್ಯ ಯೋಜನೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ. ಅಪೌಷ್ಟಿಕತೆ, ರಕ್ತಹೀನತೆ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ವಿಶೇಷ ಆರೈಕೆ, ಕಾಳಜಿ ಹಾಗೂ ಚಿಕಿತ್ಸೆ ನೀಡುವ ಮೂಲಕ ಕೋವಿಡ್ ಮೂರನೇ ಅಲೆ ಬಾಧಿಸದಂತೆ ತಡೆಯಲಾಗುವುದು.