ಬೆಂಗಳೂರು :ರಾಜ್ಯಾದ್ಯಂತ ಅಕಾಲಿಕ ಮಳೆಯ(Heavy rain) ಆರ್ಭಟ ಜೋರಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ವಿವಿಧೆಡೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಮನೆ, ಬೆಳೆ, ಜೀವ ಹಾನಿ ಸಂಭವಿಸಿದೆ. ಪ್ರಾಥಮಿಕ ವರದಿ ಪ್ರಕಾರ ಈವರೆಗಿನ ಮಳೆ ಹಾನಿ ವರದಿ ಇಲ್ಲಿದೆ.
ರಾಜ್ಯದಲ್ಲಿ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಆಗಿರುವ ವ್ಯಾಪಕ ಮಳೆಯಿಂದ ರಾಜ್ಯ ತತ್ತರಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಿದ್ದಾನೆ. ಅಕಾಲಿಕ ಮಳೆಯಿಂದಾಗಿ ಚಿಕ್ಕಮಗಳೂರು, ಬೆಳಗಾವಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಸಾವಿರಾರು ಹೆಕ್ಟೇರ್ ಪ್ರದೇಶಗಳಲ್ಲಿ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಇದರಿಂದಾಗಿ ರೈತರು ಕಂಗಾಲಾಗಿದ್ದಾರೆ.
ದಕ್ಷಿಣ ಕರ್ನಾಟಕ ವರುಣನ ಆರ್ಭಟಕ್ಕೆ ತತ್ತರಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ನೀರು ನಿಂತು ಬೆಳೆಗಳು ಕೊಚ್ಚಿ ಹೋಗಿವೆ(crop lost).
ಇತ್ತ ಬೆಳಗಾವಿ, ಕೊಪ್ಪಳ, ರಾಯಚೂರು ಜಿಲ್ಲೆಗಳು ಮಹಾಮಳೆಗೆ ತತ್ತರಿಸಿವೆ. ಸಾವಿರಾರು ಹೆಕ್ಟೇರ್ ಪ್ರದೇಶಗಳಲ್ಲಿ ಬೆಳೆಯಲಾಗಿರುವ ಭತ್ತ ಹಾಗೂ ಇನ್ನಿತರ ಬೆಳೆಗಳು ಜಲಾವೃತಗೊಂಡಿದ್ದರಿಂದ ರೈತರು ಕಂಗಾಲಾಗಿದ್ದಾರೆ. ಮಲೆನಾಡು ಚಿಕ್ಕಮಗಳೂರು ಜಿಲ್ಲೆಯಲ್ಲೂ ಧಾರಾಕಾರ ಮಳೆಯಿಂದಾಗಿ ಅಡಿಕೆ, ಕಾಳುಮೆಣಸು, ಕಾಫಿ ಬೆಳೆಗಳು ಜಲಾವೃತಗೊಂಡಿವೆ. ತುಮಕೂರು ಜಿಲ್ಲೆಯಲ್ಲೂ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ.
ರಾಜ್ಯದಲ್ಲಿನ ಮಳೆ ಹಾನಿ ಏನಿದೆ? :ರಾಜ್ಯಾದ್ಯಂತ ಸುರಿಯುತ್ತಿರುವ ಅಕಾಲಿಕ ಮಳೆಗೆ(unseasonal rain) ಈವರೆಗೆ 10 ಮಂದಿ ಪ್ರಾಣ ಕಳೆದುಕೊಂಡಿರುವ ಬಗ್ಗೆ ವರದಿಯಾಗಿದೆ. ಮಳೆಯ ಅಬ್ಬರಕ್ಕೆ ಸುಮಾರು 2,05,218 ಹೆಕ್ಟೇರ್ ಪ್ರದೇಶದಲ್ಲಿನ ಕೃಷಿ ಬೆಳೆ ಹಾನಿಗೊಳಗಾಗಿದೆ. ಅದೇ ರೀತಿ 28,326 ಹೆಕ್ಟೇರ್ ತೋಟಗಾರಿಕೆ ಬೆಳೆ ನಷ್ಟವಾಗಿರುವ ಬಗ್ಗೆ ಪ್ರಾಥಮಿಕ ವರದಿಯಾಗಿದೆ.
ಸುಮಾರು 12 ದೊಡ್ಡ ಪ್ರಾಣಿಗಳು, 85 ಸಣ್ಣ ಪ್ರಾಣಿಗಳು ಮಳೆಗೆ ಕೊಚ್ಚಿ ಹೋಗಿವೆ. 157 ಮನೆಗಳು ಮಳೆಗೆ ಸಂಪೂರ್ಣವಾಗಿ ಹಾನಿಗೊಳಗಾಗಿದ್ದರೆ, 3,531 ಮನೆಗಳು ಭಾಗಶಃ ಹಾನಿಗೀಡಾಗಿವೆ.
474 ಕಿ.ಮೀ. ಉದ್ದದ ರಸ್ತೆ ಮಳೆಗೆ ಕೊಚ್ಚಿ ಹೋಗಿದೆ. ಅದೇ ರೀತಿ 44 ಸೇತುವೆಗಳು ಹಾನಿಯಾಗಿವೆ. 2 ಶಾಲೆಗಳು ಹಾನಿಯಾಗಿದ್ದರೆ, 1 ಪ್ರಾಥಮಿಕ ಆರೋಗ್ಯ ಕೇಂದ್ರ, 263 ವಿದ್ಯುತ್ ಕಂಬಗಳು ಕೊಚ್ಚಿ ಹೋಗಿವೆ. 132 ವಿದ್ಯುತ್ ಟ್ರಾನ್ಸ್ಫಾರ್ಮರ್ಸ್ ಮಳೆಗೆ ಹಾನಿಯಾಗಿವೆ.