ಬೆಂಗಳೂರು:ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಸಂಭವಿಸಬೇಕಾಗಿದ್ದ ದೊಡ್ಡ ದುರಂತವೊಂದು ಸುದೈವವಶಾತ್ ತಪ್ಪಿದೆ.
ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ವೈದ್ಯರು ಹಾಗೂ ಇಡೀ ಆಸ್ಪತ್ರೆಯ ಸಿಬ್ಬಂದಿಯ ಮುನ್ನೆಚ್ಚರಿಕೆ ಮತ್ತು ಕ್ಷಿಪ್ರ ಕಾರ್ಯಾಚರಣೆಯ ಫಲವಾಗಿ ಆಕ್ಸಿಜನ್ ಅನಾಹುತ ಬೆಂಗಳೂರಿನಲ್ಲಿ ಸ್ವಲ್ಪದರಲ್ಲೇ ತಪ್ಪಿದ್ದು 200 ರೋಗಿಗಳ ಪ್ರಾಣ ಉಳಿದಿದೆ.
ರಾತ್ರಿ ನಡೆದಿದ್ದೇನು? ಘಟನೆಯ ಸಂಪೂರ್ಣ ವಿವರ..
ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 200 ಸೋಂಕಿತರು ಆಕ್ಸಿಜನ್ ಬೆಡ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರಿಗೆ ಒದಗಿಸಲಾಗುತ್ತಿದ್ದ ಆಮ್ಲಜನಕವು ರಾತ್ರಿಯ ವೇಳೆಗೆ ಖಾಲಿಯಾಗುತ್ತಾ ಬಂದಿತ್ತು. ಪ್ರಾಕ್ಸಿ ಏರ್ ಎನ್ನುವ ಕಂಪನಿ ಬುಧವಾರ ರಾತ್ರಿ 11 ಗಂಟೆಗೆ ಆಸ್ಪತ್ರೆಗೆ ಆಮ್ಲಜನಕ ಪೂರೈಕೆ ಮಾಡಬೇಕಾಗಿತ್ತು. ಆದರೆ, ಬಳ್ಳಾರಿಯಿಂದ ಬರಬೇಕಾಗಿದ್ದ ಆ ಕಂಪನಿಯ ಟ್ಯಾಂಕರ್ ರಾತ್ರಿ 11.30 ಆದರೂ ಬರಲೇ ಇಲ್ಲ. ಬದಲಿಗೆ ಆ ಟ್ಯಾಂಕರ್ ಕೆ.ಸಿ.ಜನರಲ್‌ಗೆ ಬರುವ ಬದಲು ಖಾಸಗಿ ಆಸ್ಪತ್ರೆಗೆ ಹೋಗಿದೆ ಎಂಬ ವಿಷಯ ತಿಳಿದುಬಂದಿದೆ.
ಒಂದೆಡೆ ಆಕ್ಸಿಜನ್ ಕಡಿಮೆಯಾಗುತ್ತಿರುವ ವಿಷಯ ಗೊತ್ತಾದ ಕೂಡಲೇ ಸಿಬ್ಬಂದಿ, ಆಕ್ಸಿಜನ್ ನಿರ್ವಹಣೆ ಹೊಣೆ ಹೊತ್ತಿದ್ದ ವೈದ್ಯಾಧಿಕಾರಿ ಡಾ.ರೇಣುಕಾ ಪ್ರಸಾದ್ ಗಮನಕ್ಕೆ ತಂದಿದ್ದಾರೆ. ಕೂಡಲೇ ಡಾ.ಪ್ರಸಾದ್ ಅವರು ಪ್ರಾಕ್ಸಿ ಏರ್ ಸಂಸ್ಥೆಯನ್ನು ಸಂಪರ್ಕಿಸುವ ಪ್ರಯತ್ನ ಮಾಡಿದ್ದಾರೆ. ಅವರ ಪ್ರಯತ್ನಗಳು ಸಫಲವಾಗಿಲ್ಲ. ತತ್‌ಕ್ಷಣವೇ ಅವರು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರಿಗೆ ಮಧ್ಯರಾತ್ರಿ 12.30ರ ಹೊತ್ತಿಗೆ ಕರೆ ಮಾಡಿ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ಕಾರ್ಯ ಪ್ರವೃತ್ತರಾದ ಡಿಸಿಎಂ, ಎಲ್ಲೆಲ್ಲಿ ಆಮ್ಲಜನಕ ಲಭ್ಯವಿದೆ ಎಂಬುದನ್ನು ಕ್ಷಿಪ್ರಗತಿಯಲ್ಲಿ ಪತ್ತೆ ಹಚ್ಚಿದರು. ಕೊನೆಗೆ ಯುನಿವರ್ಸಲ್ ಎಂಬ ಕಂಪನಿ ಜತೆ ಮಾತನಾಡಿ ತುರ್ತಾಗಿ ಆಕ್ಸಿಜನ್ ವ್ಯವಸ್ಥೆ ಮಾಡುವಲ್ಲಿ ಯಶಸ್ವಿಯಾದರು.
ಯುನಿವರ್ಸಲ್ ಕಂಪನಿಯಿಂದ ಆಕ್ಸಿಜನ್ ವ್ಯವಸ್ಥೆ ಮಾಡಿದ ಡಿಸಿಎಂ, ಮಲ್ಲೇಶ್ವರಂ ಪೊಲೀಸರ ಜತೆಯೂ ಮಾತನಾಡಿ ಆಮ್ಲಜನಕದ ನಿರಂತರ ಸಾಗಣೆಗೆ ನೆರವಾಗುವಂತೆ ಸೂಚಿಸಿದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಯುನಿವರ್ಸಲ್ ಕಂಪನಿ-ಕೆ.ಸಿ.ಜನರಲ್ ನಡುವಿನ ಮಾರ್ಗಮಧ್ಯೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿ ಮೊದಲು 20 ಜಂಬೋ ಸಿಲಿಂಡರ್‌ಗಳನ್ನು ತರಿಸಲು ಸಹಕರಿಸಿದ್ದಾರೆ. ಅರೆಕ್ಷಣವೂ ಸಮಯ ಪೋಲು ಮಾಡದೇ ಇಡೀ ಆಸ್ಪತ್ರೆಯ ಸಿಬ್ಬಂದಿಯೆಲ್ಲಾ ಒಟ್ಟಾಗಿ ಸೇರಿ ಬೆಳಗ್ಗಿನ ಜಾವ 4.45 ರವರೆಗೆ ರೋಗಿಗಳಿಗೆ ಆ ಸಿಲಿಂಡರ್‌ಗಳ ಮೂಲಕವೇ ಆಮ್ಲಜನಕ ಸಂಪರ್ಕ ಕಲ್ಪಿಸಿದ್ದಾರೆ.