ಬೆಂಗಳೂರು:ಫೇಸ್ಬುಕ್ ಪೋಸ್ಟ್ ವಿಚಾರವಾಗಿ ನಗರದ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಹಾಗೂ ಕಾವಲ್ಭೈರ್ ಸಂದ್ರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 30 ಜನರ ಬಂಧನ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಖಂಡ ಶ್ರೀನಿವಾಸಮೂರ್ತಿ ಮನೆ,ಕಚೇರಿ ಮೇಲೆ ಕಲ್ಲು ತೂರಾಟ; ಶಾಂತಿ ಕಾಪಾಡುವಂತೆ ಮನವಿ ಮಾಡಿದ ಶಾಸಕ!
ಹಿಂಸಾಚಾರದಲ್ಲಿ ಭಾಗಿಯಾದ ಆರೋಪದ ಮೇಲೆ 30 ಜನರ ಬಂಧನ ಮಾಡಲಾಗಿದ್ದು, ಘಟನೆಯಲ್ಲಿ ಭಾಗಿಯಾಗಿರುವ ಇತರರಿಗೋಸ್ಕರ ಶೋಧ ಕಾರ್ಯ ಮುಂದುವರಿದಿದೆ ಎಂದು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಗಲಭೆ ಪೀಡಿತ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿ
ಮುಂಜಾಗ್ರತ ಕ್ರಮವಾಗಿ ಗಲಭೆ ಪೀಡಿತ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಏರಿಯಾದಿಂದ ಹೊರಗೆ ಹಾಗೂ ಒಳ ಬಾರದಂತೆ ಎಲ್ಲ ಕಡೆಗಳಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಇದರ ಜತೆಗೆ ಬೆಂಗಳೂರಿನಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ಗಲಭೆ ಸೃಷ್ಟಿಸಿದ ಕಿಡಿಗೇಡಿಗಳ ಬಂಧಿಸಲು ವಿಶೇಷ ತಂಡ ರಚನೆ ಮಾಡಲಾಗುತ್ತಿದೆ. ಈ ಹಿಂದೆ ಕಾರ್ಯನಿರ್ವಹಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕರೆಯಿಸಿಕೊಳ್ಳಲಾಗುತ್ತಿದೆ. ಕಲ್ಲು ತೂರಾಟ ನಡೆಸಿದವರ ವಿರುದ್ಧ ಬೆಳಗ್ಗೆಯೊಳಗೆ ಬಂಧಿಸಿ ಗುಂಡಾ ಕಾಯ್ದೆಯಡಿ ಜೈಲಿಗೆ ಅಟ್ಟಲು ಪೊಲೀಸರು ಸಿದ್ದತೆ ನಡೆಸುತ್ತಿದ್ದಾರೆ.
ಸ್ಥಳದಲ್ಲಿ ಈಗಾಗಲೇ 1500ಕ್ಕೂ ಹೆಚ್ಚು ಪೊಲೀಸರು ಬೀಡು ಬಿಟ್ಟಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಳಗ್ಗೆ ಇನ್ನೂ 20 ತುಕಡಿಗಳು ಬರಲಿವೆ. ಈಗಾಗಲೇ ಕೆಎಸ್ಆರ್,ರಾಜ್ಯ ಕೈಗಾರಿಕಾ ಪಡೆಗಳು ಕಾರ್ಯನಿರ್ವಹಿಸುತ್ತಿವೆ.
60 ಪೊಲೀಸರಿಗೆ ಗಾಯ
ಘಟನೆ ವೇಳೆ ಎಸಿಪಿ ಸೇರಿದಂತೆ 60 ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಪರಿಸ್ಥಿತಿ ನಿಯಂತ್ರಣ ತೆಗೆದುಕೊಂಡು ಬರುವ ಉದ್ದೇಶದಿಂದ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಈ ವೇಳೆ ಇಬ್ಬರು ಸಾವನ್ನಪ್ಪಿದ್ದಾಗಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.