ಬೆಂಗಳೂರು: "ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ" ಎಂಬ ಹೆಸರಿನಲ್ಲಿ 1 ನವೆಂಬರ್ 2023 ರಿಂದ 01 ನವೆಂಬರ್ 2024ರ ವರೆಗೆ ಕರ್ನಾಟಕ ಸಂಭ್ರಮ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಿಳಿಸಿದರು. ಕರ್ನಾಟಕ ಸಂಭ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸುವ ಕುರಿತು ಚರ್ಚಿಸಲು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ದೇಶಿ ಕ್ರೀಡೆ ಹಮ್ಮಿಕೊಳ್ಳುವುದು, ರಾಜ್ಯದ ದೇಶಿ ಸಂಸ್ಕೃತಿಯನ್ನು ಹೆಚ್ವು ಬಿಂಬಿಸುವುದು, ಕನ್ನಡ ನಾಡು, ಸಂಸ್ಕೃತಿ ಮತ್ತು ಪ್ರಾದೇಶಿಕ ಭವ್ಯತೆಯನ್ನು ಈ ಸಂದರ್ಭದಲ್ಲಿ ಯುವ ಪೀಳಿಗೆಗೆ ಮುಟ್ಟಿಸುವ ಕೆಲಸ ಆಗಬೇಕು. ಈ ಸಂದರ್ಭದಲ್ಲಿ ಅರ್ಥಪೂರ್ಣ, ಸಂಭ್ರಮದ ಕಾರ್ಯಕ್ರಮ ಆಯೋಜಿಸಿ ಎಂದು ಸಿಎಂ ಸೂಚಿಸಿದರು. ನಾಡಿನ ಸಾಹಿತಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ಅವರ ಸಲಹೆಗಳನ್ನು ಪಡೆಯಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.
ಸ್ಮಾರಕ ಅಭಿವೃದ್ಧಿ, ಜೀರ್ಣೋದ್ಧಾರ: ವಿಧಾನಸೌಧ ಹಾಗೂ ಶಾಸಕರ ಭವನದ ಮಧ್ಯೆ ತಾಯಿ ಭುವನೇಶ್ವರಿ ಪ್ರತಿಮೆ ಸ್ಥಾಪಿಸುವುದು, ಮೈಸೂರಿನಲ್ಲಿ ದೇವರಾಜ ಅರಸರ ಪ್ರತಿಮೆ ಸ್ಥಾಪನೆ, ಧಾರವಾಡದ ದಿ.ಅದರಗುಂಚಿ ಶಂಕರಗೌಡ , ಬಳ್ಳಾರಿಯ ಹುತಾತ್ಮ ರಂಜಾನ್ ಸಾಬ್ ಹಾಗೂ ಗದಗ ಜಿಲ್ಲೆಯ ದಿ.ಅಂದಾನಪ್ಪ ದೊಡ್ಡಮೇಟಿ ಅವರ ಸ್ಮಾರಕ ಅಭಿವೃದ್ಧಿ, ಜೀರ್ಣೋದ್ಧಾರ ಕಾರ್ಯ ಹಮ್ಮಿಕೊಳ್ಳುವುದು ಸೇರಿದಂತೆ ಹಲವು ರೀತಿಯ ಕಾರ್ಯಕ್ರಮಗಳನ್ನು ರೂಪಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.