ಬೆಂಗಳೂರು: 5 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶಿಸಿತ್ತು. ಈ ಬೆನ್ನಲ್ಲೇ 2022-23ನೇ ಸಾಲಿನಲ್ಲಿ 5 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳಿಗೆ ನಿಗದಿಪಡಿಸಲಾಗಿದ್ದ ಬೋರ್ಡ್ ಪರೀಕ್ಷೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದೂಡಿದೆ. ಬೋರ್ಡ್ ಪರೀಕ್ಷೆಗೆ ಮುಂದಿನ ದಿನಗಳಲ್ಲಿ ನ್ಯಾಯಾಲಯವು ಅನುಮತಿ ನೀಡಿದ್ರೆ, ಪರೀಕ್ಷೆ ನಡೆಸುವ ದಿನಾಂಕವನ್ನು ತಿಳಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಬೋರ್ಡ್ ಪರೀಕ್ಷೆಯು ವಿದ್ಯಾರ್ಥಿಗಳ ಕಲಿಕಾ ಮಟ್ಟ, ಕಲಿಕಾ ನ್ಯೂನ್ಯತೆಗಳು ಹಾಗೂ ಯಾವ ವಿಷಯದಲ್ಲಿ ಹಿನ್ನಡೆಯುಂಟಾಗಿದೆ ಎಂಬುದನ್ನು ತಿಳಿಯುವುದಾಗಿದೆ. ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವುದು ಈ ಪಬ್ಲಿಕ್ ಪರೀಕ್ಷೆಯ ಉದ್ದೇಶವಾಗಿರಲಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.
ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ದ್ವಿಸದಸ್ಯ ಪೀಠ ನಿರಾಕರಣೆ: 5 ಮತ್ತು 8ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ರದ್ದು ಪಡಿಸಿದ್ದ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ದ್ವಿಸದಸ್ಯ ಪೀಠ ಇಂದು ನಿರಾಕರಿಸಿದೆ. ಈ ನಡುವೆ ಮಾರ್ಚ್.13ರಿಂದ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಸರ್ಕಾರ ತಿಳಿಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆ ಈ ಆದೇಶದಿಂದಾಗಿ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದಲ್ಲೇ ಮೌಲ್ಯಮಾಪನದ ಬದಲು ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ಮುಂದಾಗಿದ್ದ ಸರ್ಕಾರಕ್ಕೆ ಕ್ರಮಕ್ಕೆ ಹಿನ್ನಡೆಯಾದಂತಾಗಿದೆ. ಈ ಸಂಬಂಧ ಸರ್ಕಾರ ಹೊರಡಿಸಿದ್ದ ಸುತ್ತೋಲೆ ರದ್ದು ಕೋರಿ ಕರ್ನಾಟಕ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ ಮತ್ತಿತರರು ಸಲ್ಲಿಸಿದ್ದ ತಕರಾರು ಅರ್ಜಿಗಳನ್ನು ಪುರಸ್ಕರಿಸಿದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಜಿ. ನರೇಂದರ್ ಮತ್ತು ನ್ಯಾ.ಅಶೋಕ್ ಎಸ್ ಕಿಣಗಿ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿ ವಿಚಾರಣೆಯನ್ನು ಮಾ.14ಕ್ಕೆ ಮುಂದೂಡಿದೆ.
ಅಲ್ಲದೆ, ಪರೀಕ್ಷೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುಂಠಿತವಾಗುವುದಿಲ್ಲ ಎಂದು ಸರ್ಕಾರದ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಮಾ.13ರಿಂದ ಆರಂಭವಾಗಬೇಕಿರುವ ಪರೀಕ್ಷೆಯನ್ನು ಸರ್ಕಾರ ಸದ್ಯಕ್ಕೆ ತಡೆಹಿಡಿಯಲಿ. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡುವಂತೆ ಕೋರಿರುವ ಮಧ್ಯಂತರ ಅರ್ಜಿ ವಿಚಾರಣೆ 14 ರಂದು ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಈ ಪರೀಕ್ಷೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಕಟಣೆ ಹೊರಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಕೋರಿದೆ.
ಜೊತೆಗೆ ಪರೀಕ್ಷೆ ಮುಂದೂಡಲ್ಪಟ್ಟ ಕಾರಣದಿಂದ ವಿದ್ಯಾರ್ಥಿಗಳ ಮೇಲೆ ಯಾವುದೇ ದುಷ್ಪರಿಣಾಮ ಆಗಲ್ಲ ಎಂಬುದನ್ನು ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ತಿಳಿದುವಂತೆ ನ್ಯಾಯಪೀಠ ಸರ್ಕಾರಕ್ಕೆ ಸೂಚನೆ ನೀಡಿದೆ. ಸರ್ಕಾರದ ಪರ ವಾದ ಮಂಡಿಸಿದ್ದ ವಕೀಲರು, ಈ ಪರೀಕ್ಷೆಯಿಂದ ವಿದ್ಯಾರ್ಥಿಗಳ ಮೇಲೆ ಯಾವುದೇ ದುಷ್ಪರಿಣಾಮ ಆಗಲ್ಲ. ಹೀಗಾಗಿ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡುವಂತೆ ಕೋರಿದರು.
ಅಲ್ಲದೆ ಪರೀಕ್ಷೆಗೆ ಎಲ್ಲಾ ಸಿದ್ಧತೆ ನಡೆಸಲಾಗಿದೆ. ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಮಾಡುವ ಉದ್ದೇಶವಿಲ್ಲ. ಕೇವಲ ವಿದ್ಯಾರ್ಥಿಗಳ ಕಲಿಕಾ ನ್ಯೂನತೆಗಳನ್ನು ಅರಿಯಲು ಪರೀಕ್ಷೆ ಮಾಡಲಾಗುತ್ತಿದೆ ಎಂದು ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ ಏನು ?ರಾಜ್ಯ ಪಠ್ಯಕ್ರಮ ಶಾಲೆಗಳ 5 ಮತ್ತು 8ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಂಕನ ಪರೀಕ್ಷೆಗೆ ಬದಲಾಗಿ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ತೀರ್ಮಾನಿಸಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ ಮತ್ತಿತರರು ತಕರಾರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರು ಅವರಿದ್ದ ಪೀಠ, ಸರ್ಕಾರ ಹೊರಡಿಸಿರುವ ಸುತ್ತೋಲೆ ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ಉದ್ದೇಶಗಳಿಗೆ ವಿರುದ್ಧವಾಗಿದೆ ಹಾಗೂ ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆ ಪಾಲನೆಯಾಗಿಲ್ಲ ಎಂದು ಅಭಿಪ್ರಾಯಪಟ್ಟು ಸುತ್ತೋಲೆಗಳನ್ನು ರದ್ದುಪಡಿಸಿ ಶುಕ್ರವಾರ (ಮಾ.10) ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.
ಇದನ್ನೂ ಓದಿ: 5, 8 ತರಗತಿಗಳ ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ ಹೈಕೋರ್ಟ್