ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಏರುಗತಿಯಲ್ಲಿ ಸಾಗಿದ್ದು, ಮಂಗಳವಾರ 74 ಜನರಲ್ಲಿ ಸೋಂಕು ದೃಢಪಟ್ಟಿದೆ. ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ ತಲಾ ಒಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಸದ್ಯ ರಾಜ್ಯದಲ್ಲಿ 464 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇದರಲ್ಲಿ 423 ಜನರು ಮನೆಯಲ್ಲೇ ಆರೈಕೆಯಲ್ಲಿದ್ದು, 41 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 16 ಜನರು ಐಸಿಯು ಹಾಗೂ 25 ಜನರು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮಂಗಳವಾರ 6,403 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ಪ್ರಮಾಣ ಶೇಕಡಾ 1.15 ರಷ್ಟು ಇದೆ. ಮುಖ್ಯವಾಗಿ ಬೆಂಗಳೂರಿನಲ್ಲಿ 2,104 ಮಂದಿ ಕೋವಿಡ್ ಪರೀಕ್ಷೆಗೆ ಒಳಗಾಗಾಗಿದ್ದು, 57 ಜನರಿಗೆ ಸೋಂಕು ದೃಢಪಟ್ಟಿದೆ.
ರಾಜ್ಯದಲ್ಲಿ ಕೋವಿಡ್ ಉಪತಳಿ ಜೆಎನ್ 1 ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ, ಚಿಕಿತ್ಸಾ ಸಿದ್ಧತೆ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ನಿನ್ನೆ ಸಚಿವ ಸಂಪುಟ ಉಪ ಸಮಿತಿಯ ಸಭೆ ನಡೆಯಿತು. ಆಸ್ಪತ್ರೆಗಳಿಗೆ ಮಾರ್ಗಸೂಚಿ ಸಿದ್ಧಪಡಿಸುವ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಕೋವಿಡ್ ನಿಯಂತ್ರಣ ಹಾಗೂ ಇತರ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಇತ್ತೀಚೆಗೆ ಸಂಪುಟ ಉಪ ಸಮಿತಿ ರಚನೆ ಮಾಡಿದೆ.
ಸಾರ್ವಜನಿಕರು ಜೆಎನ್ 1 ಕುರಿತು ಆತಂಕ ಪಡುವ ಅಗತ್ಯವಿಲ್ಲ. ಇದು ಅಪಾಯಕಾರಿ ಅಲ್ಲ. ಆದರೆ, ಪ್ರತಿಯೊಬ್ಬರು ಮುನ್ನೆಚ್ಚರಿಕೆ ವಹಿಸಬೇಕಿದೆ. ಆರೋಗ್ಯ ಇಲಾಖೆಯಿಂದ ಈಗಾಗಲೇ ಮಾರ್ಗಸೂಚಿ ಹೊರಡಿಸಲಾಗಿದೆ. 60 ವರ್ಷ ಮೇಲ್ಪಟ್ಟವರು, ಗರ್ಭಿಣಿಯರು, ಕಿಡ್ನಿ, ಹೃದಯ ಇತರ ಕಾಯಿಲೆ ಹೊಂದಿದವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚಿಸಲಾಗಿದೆ.
ಇದನ್ನೂ ಓದಿ:ಕೊರೊನಾ ರೂಪಾಂತರಿ JN.1 ವೈರಸ್ಗೆ ಹಾಸನದಲ್ಲಿ ಮೊದಲ ಬಲಿ
ಸೋಮವಾರ ರಾಜ್ಯದಲ್ಲಿ ಕೊರೊನಾಕ್ಕೆ ಮೂವರು ಬಲಿಯಾಗಿದ್ದರು. ಮಂಗಳವಾರ ಮತ್ತಿಬ್ಬರು ಬಲಿಯಾಗಿದ್ದಾರೆ. ದಿನದಿನಕ್ಕೂ ಕೋವಿಡ್ ಸೋಂಕು ವ್ಯಾಪಿಸುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಮತ್ತೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಸೋಂಕು ದೃಢಪಟ್ಟವರು 7 ದಿನಗಳ ಕಾಲ ಮನೆಯಲ್ಲೇ ಐಸೋಲೇಷನ್ ಆಗುವಂತೆ ಸೂಚಿಸಿದೆ. ನೌಕರರಾಗಿದ್ದರೆ, ಖಾಸಗಿ ಸಂಸ್ಥೆ ಮತ್ತು ಸರ್ಕಾರಿ ಸಂಸ್ಥೆಗಳು ಅವರಿಗೆ ವೇತನ ಸಹಿತ ರಜೆ ನೀಡುವಂತೆ ಸರ್ಕಾರ ಆದೇಶಿಸಿದೆ.
ಇನ್ನು ನೆರೆಯ ರಾಜ್ಯ ತೆಲಂಗಾಣದಲ್ಲೂ ಕೋವಿಡ್ ತನ್ನ ಪ್ರಭಾವ ಬೀರತೊಡಗಿದೆ. ಹೈದರಾಬಾದ್ನಲ್ಲಿ ಶ್ವಾಸಕೋಶದ ಕಾಯಿಲೆಯಿಂದ ಉಸ್ಮಾನಿಯಾ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ರೋಗಿಗಳು ಸಾವನ್ನಪ್ಪಿದ್ದಾರೆ. ತೀವ್ರ ಅನಾರೋಗ್ಯದಿಂದಾಗಿ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಉಸ್ಮಾನಿಯಾ ಅಧೀಕ್ಷಕ ನಾಗೇಂದ್ರ ತಿಳಿಸಿದ್ದಾರೆ. ಆದಾಗ್ಯೂ, ಇಬ್ಬರಿಗೂ ಕೊರೊನಾ ಪಾಸಿಟಿವ್ ಇರುವುದು ಪರೀಕ್ಷೆಯಿಂದ ದೃಢಪಟ್ಟಿತ್ತು ಎಂದು ಅವರು ತಿಳಿಸಿದ್ದಾರೆ.