ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಬಿಪಿಎಲ್ ಕುಟುಂಬಗಳಿಗೆ 75 ಯುನಿಟ್ ಉಚಿತ ವಿದ್ಯುತ್ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿದೆ ಸೂಚಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು 2022-23ನೇ ಸಾಲಿನ ಎಸ್ಸಿಎಸ್ಪಿ /ಟಿಎಸ್ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಚಿವರು, ಪರಿಶಿಷ್ಟ ಜಾತಿ, ಪಂಗಡದ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಉಚಿತ 75 ಯುನಿಟ್ ವಿದ್ಯುತ್ ಸರಬರಾಜು ಮಾಡುವ ಯೋಜನೆ ರೂಪಿಸಲಾಗಿದೆ. ಈ ಯೋಜನೆಯನ್ನು ಇಂಧನ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಅನುಷ್ಠಾನಗೊಳಿಸಬೇಕೆಂದು ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 20 ಸಾವಿರ ರೂ.ಗಳ ಘಟಕ ಯೋಜನೆಯ ಸಹಾಯಧನದಲ್ಲಿ ಸ್ವಚ್ಚ ಭಾರತ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಬೇಕು. ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಸರ್ಕಾರ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ. ವಿಶೇಷವಾಗಿ ಈ ಸಮುದಾಯಕ್ಕೆ ವಸತಿ ಯೋಜನೆಯನ್ನು ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸಚಿವರು ನಿರ್ದೇಶಿಸಿದರು.