ಬೆಂಗಳೂರು:ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ವಕ್ತಾರ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಾರ್ಟಿ ಗ್ಯಾರಂಟಿಗಳ ಪಟ್ಟಿಯನ್ನು ಬುಧವಾರ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು.
ಬುಧವಾರ ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಸಂಜಯ್ ಸಿಂಗ್ ಅವರು, ''ಆಮ್ ಆದ್ಮಿ ಪಾರ್ಟಿಯು ಸುಳ್ಳು ಆಶ್ವಾಸನೆಗಳನ್ನು ನೀಡುವ ಪಕ್ಷವಲ್ಲ. ನಾವು ಆಶ್ವಾಸನೆಗಳ ಬದಲು ಗ್ಯಾರೆಂಟಿ ಕಾರ್ಡ್ ನೀಡುತ್ತೇವೆ. ಇದೊಂದು ಕರಾರುಪತ್ರವಾಗಿದ್ದು, ಇವೆಲ್ಲವನ್ನೂ ಶೇ. 100ರಷ್ಟು ಈಡೇರಿಸುತ್ತೇವೆ. ಪ್ರಣಾಳಿಕೆಯಲ್ಲಿದ್ದ ಎಲ್ಲ ಗ್ಯಾರಂಟಿಗಳನ್ನು ದೆಹಲಿಯಲ್ಲಿ ಈಡೇರಿಸಿದ್ದೇವೆ. ಪಂಜಾಬ್‌ನಲ್ಲಿ ಕೂಡ ಒಂದೊಂದಾಗಿ ಜಾರಿಗೆ ಬರುತ್ತಿದೆ. ಕರ್ನಾಟಕದಲ್ಲಿ ಪ್ರತಿ ಮನೆಗೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್, ನಿರುದ್ಯೋಗಿ ಯುವಜನತೆಗೆ ತಿಂಗಳಿಗೆ 3000 ರೂಪಾಯಿ ನಿರುದ್ಯೋಗ ಭತ್ಯೆ, ಗುಣಮಟ್ಟದ ಆರೋಗ್ಯ ಸೇವೆಗಾಗಿ ಕ್ಲಿನಿಕ್‌ಗಳು, ಸರ್ಕಾರಿ ಶಾಲೆಗಳ ಅಭಿವೃದ್ಧಿ, ಹಳೆ ಪಿಂಚಣಿ ಯೋಜನೆ ಜಾರಿ ಮುಂತಾದ ಒಟ್ಟು ಹತ್ತು ವಲಯಗಳಿಗೆ ಸಂಬಂಧಿಸಿದ ಪ್ರಮುಖ ಗ್ಯಾರೆಂಟಿಗಳನ್ನು ಇಂದು ಘೋಷಿಸಲಾಗುತ್ತಿದೆ. ಜೊತೆಗೆ ಬೆಂಗಳೂರು ಹಾಗೂ ರಾಜ್ಯದ ಪ್ರಾದೇಶಿಕ ಅಭಿವೃದ್ಧಿಗಾಗಿ ಪ್ರತ್ಯೇಕವಾದ ಗ್ಯಾರಂಟಿಗಳನ್ನು ಘೋಷಿಸುತ್ತಿದ್ದೇವೆ'' ಎಂದರು.
ಆಪ್ ಪಕ್ಷ ರಾಷ್ಟ್ರೀಯ ಪಕ್ಷದ ಸ್ಥಾನಮಾನಕ್ಕೆ ಅರ್ಹ- ಸಂಜಯ್ ಸಿಂಗ್: ''ಆಮ್ ಆದ್ಮಿ ಪಾರ್ಟಿಯು ದೆಹಲಿಯಲ್ಲಿ ಮೂರನೇ ಬಾರಿ ಹಾಗೂ ಪಂಜಾಬ್‌ನಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದೆ. ಗೋವಾ ಚುನಾವಣೆಯಲ್ಲಿ ಶೇ.6ಕ್ಕಿಂತಲೂ ಹೆಚ್ಚು ಮತ ಪಡೆದಿದ್ದೇವೆ. ಗುಜರಾತ್‌ನಲ್ಲಿ ಶೇ. 14ರಷ್ಟು ಮತ ಪಡೆದಿದ್ದು, ಐವರು ಶಾಸಕರು ಆಯ್ಕೆಯಾಗಿದ್ದಾರೆ. ಈ ಮೂಲಕ ಆಮ್ ಆದ್ಮಿ ಪಾರ್ಟಿಯು ರಾಷ್ಟ್ರೀಯ ಪಕ್ಷದ ಸ್ಥಾನಮಾನಕ್ಕೆ ಕಾನೂನಿನ ಪ್ರಕಾರ ಅರ್ಹವಾಗಿದ್ದರೂ ಚುನಾವಣಾ ಆಯೋಗವು ಇನ್ನೂ ಇದನ್ನು ಅಧಿಕೃತವಾಗಿ ಘೋಷಿಸಿಲ್ಲ. ಸ್ಥಾನಮಾನ ಕೋರಿ ನಾವು ಸಲ್ಲಿಸಿದ್ದ ಅರ್ಜಿಯನ್ನು ಹಲವು ತಿಂಗಳುಗಳಿಂದ ಬಾಕಿ ಉಳಿಸಿಕೊಂಡಿದೆ'' ಎಂದು ಸಂಜಯ್ ಸಿಂಗ್ ಬೇಸರ ವ್ಯಕ್ತಪಡಿಸಿದರು.