ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆ ನಗರದಲ್ಲಿ ನಡೆದ ಆ್ಯಸಿಡ್ ದಾಳಿ ಖಂಡಿಸಿ ಯುವತಿ ವ್ಯಾಸಂಗ ಮಾಡಿದ್ದ ಶಾಲಾ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಹಾಗೂ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು.
ಕಳೆದ ಎರಡು ದಿನಗಳ ಹಿಂದೆ ಯುವತಿ ಮೇಲೆ ಪಾಗಲ್ ಪ್ರೇಮಿಯೇ ಸುಂಕದಕಟ್ಟೆಯ ಮುತ್ತೂಟ್ ಮಿನಿ ಫೈನಾನ್ಸ್ ಕಚೇರಿ ಆವರಣದಲ್ಲೇ ಆ್ಯಸಿಡ್ ಎರಚಿ ಪೈಶಾಚಿಕ ಕೃತ್ಯ ನಡೆಸಿದ್ದ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. 2013ರಲ್ಲಿ ಇದೇ ಶಾಲೆಯಲ್ಲಿ 10ನೇ ತರಗತಿ ಓದಿದ್ದಳು. ಸದ್ಯ ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸುವಂತೆ ಶಾಲಾ ವಿದ್ಯಾರ್ಥಿಗಳು ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಆ್ಯಸಿಡ್ ದಾಳಿಕೋರ ನಾಗೇಶ್‌ನನ್ನು ಬಂಧಿಸಿ, ಗಲ್ಲುಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಆಮ್ ಆದ್ಮಿ ಪಾರ್ಟಿಯು ನಗರದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಎಪಿ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ ಅವರು ಮಾತನಾಡಿ, ರಾಜ್ಯಾದ್ಯಂತ ಗಂಭೀರ ಅಪರಾಧಗಳ ಪ್ರಮಾಣ ಏರಿಕೆಯಾಗುತ್ತಿರುವುದು ಆತಂಕಕಾರಿ ಎಂದರು.