ಬೆಂಗಳೂರು:ರಾಜ್ಯ ಸರ್ಕಾರದ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪ ಮಾಡಿ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಆಯೋಗದ ಕಚೇರಿಗೆ ತೆರಳಿದ ಕಾಂಗ್ರೆಸ್ ನಿಯೋಗ ರಾಜ್ಯ ಮುಖ್ಯಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಮಾಜಿ ಸಚಿವ ಹೆಚ್.ಎಂ.ರೇವಣ್ಣ, ಎಂಎಲ್ಸಿ ಪ್ರಕಾಶ್ ರಾಥೋಡ್, ವೇಣುಗೋಪಾಲ್ ನಿಯೋಗದೊಂದಿಗೆ ಇದ್ದರು.
ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಹೀಗಿದ್ದರೂ ಸರ್ಕಾರ ವರ್ಕ್ ಆರ್ಡರ್ ನೀಡಿದೆ. ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನ ನೇಮಿಸಿದೆ. 4ಜಿ ಕಂಜೆಂಶನ್ ನಡಿ ಬಿಬಿಎಂಪಿ ಕಾಮಗಾರಿಗಳಿಗೆ ಅನುಮತಿ ನೀಡಿದೆ. ಹಲವು ಆರೋಪಗಳನ್ನ ಮುಂದಿಟ್ಟುಕೊಂಡು ದೂರು ಸಲ್ಲಿಸಲಾಯಿತು.
ಕಾಂಗ್ರೆಸ್ ನಿಯೋಗದಿಂದ ರಾಜ್ಯ ಮುಖ್ಯಚುನಾವಣಾಧಿಕಾರಿಗೆ ದೂರು ದೂರು ಸಲ್ಲಿಕೆ ನಂತರ ಮಾತನಾಡಿದ ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಉಪಚುನಾವಣೆ ಸಂದರ್ಭದಲ್ಲಿ ಆಮಿಷ ಒಡ್ಡುವ ರೀತಿ ಚುನಾವಣೆ ನಡೆಯುವ ಕ್ಷೇತ್ರದಲ್ಲಿ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ ಮಾಡಲಾಗುತ್ತಿದೆ. 15 ಕ್ಷೇತ್ರಕ್ಕೆ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಗುತ್ತಿಗೆಯನ್ನು ಅನರ್ಹ ಶಾಸಕರ ಮೂಲಕವೇ ಪಡೆಯಬೇಕೆಂದು ತಿಳಿಸಿದ್ದಾರೆ. 2 ಕೋಟಿ ರೂ.ಮೊತ್ತದ ಒಳಗಿನ ಕಾಮಗಾರಿಯನ್ನು ಟೆಂಡರ್ ಕರೆಯದೇ ನೀಡಲಾಗುತ್ತಿದೆ.
ಈ ಮೂಲಕ ಮತದಾರರನ್ನು ಓಲೈಸುವ ಕಾರ್ಯ ಮಾಡಲಾಗುತ್ತಿದೆ. ಇದರಿಂದ ತಪ್ಪೆಸಗಿದವರ ವಿರುದ್ಧ ಕ್ರಮ ಕೈಗೊಳ್ಳಿ ಹಾಗೂ ಕೂಡಲೇ ಮಾದರಿ ನೀತಿ ಸಂಹಿತೆ ಜಾರಿಗೆ ತರಬೇಕೆಂದು ಮನವಿ ಮಾಡಿದ್ದೇವೆ ಎಂದರು. ನಿಗಮ ಮಂಡಳಿ ನೇಮಕ ರದ್ದಾಗಬೇಕು, ಟೆಂಡರ್ ನೀಡಿದ್ದನ್ನು ರದ್ದುಪಡಿಸಬೇಕು. ಚುನಾವಣೆ ಹಿನ್ನೆಲೆ ಸಾವಿರಾರು ಕೋಟಿ ಬಿಡುಗಡೆ ಮಾಡಲಾಗಿದೆ. ಅದನ್ನು ವಾಪಸ್ ಪಡೆಯಬೇಕು. ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದೇವೆ ಎಂದು ಹೇಳಿದರು.