ಬೆಂಗಳೂರು : ಖಾಸಗಿ ಆಸ್ಪತ್ರೆಗಳು ಯಾವುದೇ ನೆಪ ಹೇಳದೆ ಕೊರೊನಾ ಸೋಂಕಿತರನ್ನು ದಾಖಲಿಸಿಕೊಳ್ಳಬೇಕು ಎಂದು ಆದೇಶ ಹೊರಡಿಸಲಾಗಿದ್ದು, ಚಿಕಿತ್ಸೆ ನಿರಾಕರಿಸುವ ಆಸ್ಪತ್ರೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕ್ರಮ ಜರುಗಿಸಲು ಬಿಬಿಎಂಪಿಗೆ ಅಧಿಕಾರ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಪಿಐಎಲ್ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಪತ್ತು ನಿರ್ವಹಣಾ ಕಾಯ್ದೆ-2005 ರ ಸೆಕ್ಷನ್ 24(ಎಫ್) ಅಡಿ ಬಿಬಿಎಂಪಿಗೆ ಅಧಿಕಾರ ನೀಡಿ ಸರ್ಕಾರದ ಮಖ್ಯ ಕಾರ್ಯದರ್ಶಿಗಳು ಭಾನುವಾರ ಆದೇಶ ಹೊರಡಿಸಿದ್ದಾರೆ. ಇದಕ್ಕೂ ಮುನ್ನ ಶೇ. 50 ರಷ್ಟು ಹಾಸಿಗೆಗಳನ್ನು ಕೊರೊನಾ ಚಿಕಿತ್ಸೆಗೆ ಮೀಸಲಿಡುವಂತೆಯೂ ಖಾಸಗಿ ಆಸ್ಪತ್ರೆಗಳಿಗೆ ಆದೇಶಿಸಲಾಗಿದೆ ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಶೇ. 50 ರಷ್ಟು ಹಾಸಿಗೆಗಳನ್ನು ಕೇವಲ ಕೋವಿಡ್ ರೋಗಿಗಳಿಗೆ ಮಾತ್ರವೇ ಅಥವಾ ಎಲ್ಲ ರೋಗಿಗಳಿಗೂ ಒಟ್ಟು ಸೇರಿಸಿ ಮೀಸಲಿರಿಸಲಾಗಿದೆಯೇ ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಸರ್ಕಾರದ ಪರ ವಕೀಲರು ಕೊರೊನಾ ಚಿಕಿತ್ಸೆಗೆ ಮಾತ್ರವೇ ಮೀಸಲಿರಿಸಲು ಆದೇಶಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಅಲ್ಲದೇ ತುಮಕೂರು ರಸ್ತೆಯ ವಸ್ತು ಪ್ರದರ್ಶನಾ ಕೇಂದ್ರದಲ್ಲಿ 7 ಸಾವಿರ ಬೆಡ್ಗಳುಳ್ಳ ಕೋವಿಡ್ ಕೇರ್ ಸೆಂಟರ್ ಸಿದ್ಧಪಡಿಸಲಾಗುತ್ತಿದೆ. ಇನ್ನು ಸೋಂಕಿತರು ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಆಯ್ಕೆಯನ್ನು ರೋಗಿಗಳಿಗೆ ನೀಡಲಾಗಿದೆ ಎಂದರು.