ಬೆಂಗಳೂರು : ಬಿಜೆಪಿ ಶಾಸಕ ಪ್ರೀತಂಗೌಡ ನಿವಾಸದ ಮೇಲೆ ದಾಳಿ ಮಾಡಿ ಹಲ್ಲೆ ನಡೆಸಿದ ಪ್ರಕರಣ ಹಿನ್ನೆಲೆಯಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಯೂರಪ್ಪ ನೇತೃತ್ವದ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಘಟನೆ ಕುರಿತಂತೆ ಸಮಗ್ರ ತನಿಖೆ ಮಾಡಬೇಕೆಂದು ಮನವಿ ಮಾಡಿತ್ತು.
ಘಟನೆಯ ಮರುದಿನ ರಾತ್ರಿ ಬಿಜೆಪಿಯ ಹದಿನೆಂಟಕ್ಕೂ ಹೆಚ್ಚು ಶಾಸಕರು ಪ್ರೀತಂಗೌಡ ನಿವಾಸಕ್ಕೆ ಭೇಟಿ ನೀಡಿ ವಸ್ತುಸ್ಥಿತಿಯ ಬಗ್ಗೆ ಅಧ್ಯಯನ ನಡೆಸಿ ರಾಜ್ಯಪಾಲರಿಗೆ ದೂರು ನೀಡುವುದಾಗಿ ಹೇಳಿತ್ತು.
ಯಡಿಯೂರಪ್ಪ ನೇತೃತ್ವದ ಬಿಜೆಪಿ ನಿಯೋಗ ರಾಜಭವನಕ್ಕೆ ತೆರಳಿ ಶಾಸಕ ಪ್ರೀತಂಗೌಡ ಕುಟುಂಬಕ್ಕೆ ರಕ್ಷಣೆ ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಘಟನೆ ಕುರಿತಂತೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.
ಈ ವಿಷಯ ಕುರಿತಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು ಅವರು ರಾಜ್ಯಪಾಲರಿಗೆ ಮಾಹಿತಿ ನೀಡಿದ್ದು, ರಾಜ್ಯದ ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕಮಲ್ ಪಂತ್ ಅವರಿಂದ ಘಟನಾವಳಿ ಕುರಿತಂತೆ ಇಂದು ರಾಜ್ಯಪಾಲ ವಿ.ಆರ್. ವಾಲಾ ಅವರು ಸಂಪೂರ್ಣ ಮಾಹಿತಿಯನ್ನು ಪಡೆದಿದ್ದಾರೆ ಎಂದು ತಿಳಿದು ಬಂದಿದೆ.