ಬೆಂಗಳೂರು: ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮತಿ ಪಡೆಯದೇ ರಂಗನತಿಟ್ಟು ಮತ್ತು ಅರಬಿತಿಟ್ಟು ಪಕ್ಷಿಧಾಮಗಳಲ್ಲಿ ಹಾದು ಹೋಗುವ ರಸ್ತೆ ವಿಸ್ತರಣೆಗೆ ಮುಂದಾಗಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿ.6ಕ್ಕೆ ಮುಂದೂಡಿದೆ.
ಸಾಮಾಜಿಕ ಹೋರಾಟಗಾರ ಸಿ ಎನ್ ದೀಪಕ್ ಮತ್ತು ಡಾ ಕೆ ಶಿವರಾಮ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಲೆ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ವನ್ಯಜೀವಿ ಸಂರಕ್ಷಣೆ ಕಾಯ್ದೆಯ ಪ್ರಕಾರ ಯಾವುದೇ ಸಂರಕ್ಷಿತ ಪ್ರದೇಶದಲ್ಲಿ ರಸ್ತೆ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳು ನಡೆಯಬೇಕಾದಲ್ಲಿ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಆದರೆ, ವನ್ಯಜೀವಿ ಮಂಡಳಿಯಿಂದ ಅನುಮತಿ ಪಡೆಯದೇ ಕಾಮಗಾರಿ ನಡೆಸಲು ಮುಂದಾಗಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.